ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು:ಕೇಂದ್ರದ ಪೂರ್ವಾನುಮತಿಗೆ ಸಂಪೂರ್ಣ ಮಾಹಿತಿ ಕಳುಹಿಸಲು ಸಿಎಂ ಸೂಚನೆ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಜಲ ವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾಗಿರುವ ಪ್ರದೇಶದ ಸಂತ್ರಸ್ತರ ಸಮಸ್ಯೆಗಳ ಕುರಿತು ಇಂದು (ಗುರುವಾರ) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಬಗ್ಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ವನ್ಯಜೀವಿ ಪ್ರದೇಶವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.ಗಡಿ ನಿಗದಿಪಡಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉಪಸ್ಥಿತರಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶರಾವತಿ ಜಲ ವಿದ್ಯುತ್ ಯೋಜನೆಯಾಗಿ ಮುಳುಗಡೆಯಾದ ಪ್ರದೇಶಗಳ ಕೆಲವು ನಿರಾಶ್ರಿತರಿಗೆ ಈವರೆಗೂ ಸಹ ಸರ್ಕಾರದಿಂದ ಸೂಕ್ತ ಪರಿಹಾರ ದೊರೆತಿಲ್ಲ ಅವರಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಚಿವರು ಮನವಿ ಮಾಡಿದರು.
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂ ಮಂಜೂರಾತಿಗಾಗಿ ವಿಧಿಸಿರುವ ಮೂರು ತಲೆಮಾರಿನವರೆಗೆ ಅಂದರೆ ಸುಮಾರು 75 ವರ್ಷಗಳು ಪ್ರಧಾನವಾಗಿ ಅರಣ್ಯಗಳಲ್ಲಿ ವಾಸಿಸಿದ ದಾಖಲೆಗಳನ್ನು ಪೂರೈಸುವುದಕ್ಕೆ ಮಲೆನಾಡಿನ ಹಾಗೂ ಕರಾವಳಿ ಭಾಗದ ಅರಣ್ಯವಾಸಿಗಳಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಹಕ್ಕು ಕಾಯ್ದೆಯಲ್ಲಿ ಅರಣ್ಯವಾಸಿಗಳಿಗೆ ಅನೂಕುಲವಾಗುವ ರೀತಿಯಲ್ಲಿ ಸರಳಿಕರಣಗೊಳಿಸುವಂತೆ ಕೂಡ ಸಚಿವ ಹೆಬ್ಬಾರ್ ಮುಖ್ಯಮಂತ್ರಿಗಳಿಗೆ ವಿನಂತಿಸಿದರು. ಸಚಿವರ ಬೇಡಿಕೆಗೆ ಸಕಾರಾತ್ಮಕ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರ ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಕಲ್ಲು ಗಣಿಗಾರಿಕೆ:
ಕಲ್ಲು ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗಿದೆ ಎಂದು ಆ ಜಿಲ್ಲೆಗಳ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬಾರದ ಪರವಾನಗಿ ಹೊಂದಿರುವ ಕಲ್ಲು ಗಣಿಕಾರಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಸೂಚಿಸಿದರು.
ಸಂರಕ್ಷಿತ ಅರಣ್ಯ:
ಸಂರಕ್ಷಿತ ಅರಣ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ತಿಳಿಸಿದರು.
ಶಿವಮೊಗ್ಗ, ಶಿಕಾರಿಪುರ -ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಅರಣ್ಯ ಇಲಾಖೆ ಯೋಜನೆಗಳ ಪ್ರಗತಿಯ ವೇಗ ಹೆಚ್ಚಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಶಿವಮೊಗ್ಗ ಜಿಲ್ಲೆಗೆ ವಿಶೇಷ ಅರಣ್ಯ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಅರಣ್ಯ ಭೂಮಿ ಗುತ್ತಿಗೆ ನವೀಕರಣಕ್ಕೆ ಅರಣ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಿವರಾಮ್ ಹೆಬ್ಬಾರ, ಆರಗ ಜ್ಞಾನೇಂದ್ರ, ಉಮೇಶ್ ಕತ್ತಿ, ಸುನಿಲಕುಮಾರ್, ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement