ಅಕ್ಟೋಬರ್ ತಿಂಗಳಲ್ಲಿ ಸಾಲುಸಾಲು ಹಬ್ಬದ ರಜೆಗಳು: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಹೆಚ್ಚುವರಿ 700ಕ್ಕೂ ಅಧಿಕ ಬಸ್‌ಗಳ ಸಂಚಾರ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬದ ರಜೆಗಳು ಬಂದಿರುವುದರಿಂದ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
14-10-2021 ರಂದು ಮಹಾನವಮಿ, 15-10-2021 ರಂದು ವಿಜಯದಶಮಿ, 17-10-2021 ರಂದು ಈದ-ಮಿಲಾದ್ ಹಾಗೂ 20-10-2021 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಹೀಗೆ ಸಾಲು ಸಾಲು ರಜೆಗಳಿರುವುದರಿಂದ ಹಬ್ಬದ ರಜೆಗಳ ಸಮಯದಲ್ಲಿ ಬೆಂಗಳೂರು ಮತ್ತು ಇತರ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 700ಕ್ಕೂ ಅಧಿಕ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಅಲ್ಲದೆ ತಮ್ಮ ಊರುಗಳಿಂದ ಬೆಂಗಳೂರು, ಮಂಗಳೂರು, ಹೈದ್ರಾಬಾದ, ಪಣಜಿ ಇನ್ನಿತರೆ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗಾಗಿ ದಿನಾಂಕ: 20-10-2021 ಮತ್ತು 21-10-2021 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಸಹ ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದು ಹೇಳಿದೆ.
ಈ ಕುರಿತು ಪ್ರಯಾಣಿಕರು ಮುಂಗಡ ಟಿಕೆಟ್‌ ಕಾಯ್ದಿರಿಸುವವರು ksrtc.karnataka.gov.in ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕೋವಿಡ್-19 ರ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆಯ ಉಪಯೋಗ ಪಡೆದುಕೊಳ್ಳಬಹುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement