ಹಾನಗಲ್, ಸಿಂದಗಿ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಸಮರಕ್ಕೆ ಮುಹೂರ್ತ ನಿಗದಿಯಾಗಿದೆ. ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಕೇಂದ್ರ ಚುನಾವಣಾ ಆಯೋಗ ಇಂದು ವಿವಿಧ ರಾಜ್ಯಗಳಲ್ಲಿ ತೆರವಾಗಿರುವ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೂ ದಿನಾಂಕವನ್ನು ನಿಗದಿಪಡಿಸಿದೆ.
ಈ ಎರಡು ಕ್ಷೇತ್ರಗಳಿಗೆ ಅಕ್ಟೋಬರ್1ರಂದು ಅಧಿಸೂಚನೆ ಹೊರಡಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದೆ. ಅ.11ರಂದು ನಾಮಪತ್ರಗಳ ಪರಿಶೀಲನೆ ನಡೆದು ಅ.16 ನಾಮಪತ್ರ ಹಿಂಪಡೆಯಲು ಕೊನೆಯ ದಿನ ಎಂದು ಆಯೋಗ ತಿಳಿಸಿದೆ.
ಮಾಜಿ ಸಚಿವರಾದ ಎಂ.ಸಿ.ಮನಗೂಳಿ ಹಾಗೂ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿದ್ದ ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ಉಪಚುನಾವಣೆ ನಡೆಯಲಿದೆ.
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಸಹಜವಾಗಿ ಬಿಜೆಪಿಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.
ಇತ್ತೀಚೆಗೆ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಅಧಿಕಾರ ಹಿಡಿದಿದ್ದರೆ ಕಲಬುರಗಿಯಲ್ಲೂ ಅಧಿಕಾರ ಹಿಡಿಯುವ ಲೆಕ್ಕಾಚಾರದಲ್ಲಿದೆ. ಅದರಲ್ಲೂ ಉಪಚುನಾವಣೆ ನಡೆಯುವ ಹಾನಗಲ್‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿದೆ.
ಕಾಂಗ್ರೆಸ್ ಕೂಡ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ. ಸಿಂಧಗಿ ಹಾಗೂ ಹಾನಗಲ್‍ನಲ್ಲಿ ಗೆದ್ದರೆ 2023ರ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಬಲಪಡಿಸಬಹುದೆಂಬ ಆತ್ಮವಿಶ್ವಾಸದಿಂದ ಕೈ ಪಕ್ಷ ಸಮರಕ್ಕೆ ಸಜ್ಜಾಗಲಿದೆ.
ಈ ಹಿಂದೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಡಿಮೆ ಅಂತರದ ಸೋಲು ಹಾಗೂ ಮಸ್ಕಿಯಲ್ಲಿನ ಗೆಲುವು, ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಿರುವ ಕಾಂಗ್ರೆಸ್ ಈ ಚುನಾವಣೆಯಲ್ಲಿ ಬಿಜೆಪಿ ಠಕ್ಕರ್‌ ಕೊಡಲು ತಯಾರಿ ನಡೆಸಿದೆ.
ಸಿಂದಗಿಯಲ್ಲಿ ಮನಗೂಳಿ ಅವರ ಪುತ್ರ ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವುದರಿಂದ ಜೆಡಿಎಸ್ ಹೊಸ ಅಭ್ಯರ್ಥಿಯ ಶೋಧದಲ್ಲಿದೆ. ಹಾನಗಲ್‍ನಲ್ಲಿ ಈ ಹಿಂದೆ ಸಿ.ಎಂ. ಉದಾಸಿ ಬಿಜೆಪಿಯಿಂದ ಗೆದ್ದಿದ್ದರು. ಹಾಗಾಗಿ ಅವರಿಗೂ ಕೂಡ ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಸವಾಲಿದೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement