ಅಕ್ಟೋಬರ್ 3ರಂದು ಬಿಜೆಪಿ ಕೋರ್ ಕಮಿಟಿ ಸಭೆ: ಉಪಚುನಾವಣೆ ಅಭ್ಯರ್ಥಿಗಳು ಅಂತಿಮ..?

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಅಕ್ಟೋಬರ್ 3ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸಭೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳಿಗೆ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆಂದು ವರದಿಗಳು ತಿಳಿಸಿವೆ.
ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿದ ಬಳಿಕ ಮೊದಲ ಉಪ ಸಮರ ಈ ತಿಂಗಳು ನಡೆಯಲಿದೆ. ಹೀಗಾಗಿ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ.
ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ಆಗಮಿಸಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಉಪಚುನಾವಣೆ ನಡೆಯುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಹುತೇಕವಾಗಿ ಅಂತಿಮಗೊಳ್ಳುವ ಸಾಧ್ಯತೆಗಳಿವೆ.ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಹೆಸರನ್ನು ಅಂತಿಮಗೊಳಿಸಲಾಗುತ್ತದೆ. ಅಂತಿಮಗೊಳಿಸಿದ ಹೆಸರಿನ ಪಟ್ಟಿಯನ್ನು ಅರುಣ್ ಸಿಂಗ್ ದೆಹಲಿಗೆ ಕೊಂಡೊಯ್ಯಲಿದ್ದು, ಅಲ್ಲಿ ಅದು ಅಂತಿಮಗೊಳ್ಳಲಿದೆ ಎನ್ನಲಾಗಿದೆ.
ರಡು ಕ್ಷೇತ್ರಗಳ ಉಪಚುನಾವಣೆಯ ಜೊತೆಗೆ ವಿಧಾನ ಪರಿಷತ್‌ ಚುನಾವಣೆಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಪಕ್ಷವು ಈ ಚುನಾವಣೆಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement