ಕೇರಳ: ಭಾರಿ ಮಳೆಗೆ ಭೂ ಕುಸಿತದಿಂದ 3 ಸಾವು, 10 ಮಂದಿ ನಾಪತ್ತೆ, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ ಮುಂದುವರೆದಿದ್ದು, ರಾಜ್ಯದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಮೃತಪಟ್ಟಿದ್ದು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಈ ಸಂಬಂಧ ಸಾಕಷ್ಟು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರೀ ಮಳೆ ಕಾರಣ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ ಕೆಲವು ಅಣೆಕಟ್ಟುಗಳು ತುಂಬಿ ಹರಿಯುವ ಸಾಧ್ಯತೆ ಇದೆ.
ಕೇರಳದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯದ ಐದು ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೇರಳದ ಕೊಟ್ಟಾಯಂನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕನಿಷ್ಠ ಮೂರು ಮಂದಿ ಮೃತಪಟ್ಟಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ನಾಪತ್ತೆಯಾಗಿರುವವರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೊಟ್ಟಾಯಂನ ಕೂಟ್ಟಿಕಲ್ ಪಂಚಾಯತ್‌ನಲ್ಲಿ ಈ ಭೂಕುಸಿತ ಸಂಭವಿಸಿದ್ದು, 13 ಜನರು ಕಾಣೆಯಾಗಿದ್ದರು. ಇಲ್ಲಿಯವರೆಗೆ ನಜೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಮೂರು ಶವಗಳನ್ನು ಹೊರ ತೆಗೆಯಲಾಗಿದೆ. ಇಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಭಾರತೀಯ ನೌಕಾಪಡೆಯ ಸಹಾಯ ಪಡೆಯಲಾಗಿದೆ. ಪ್ರವಾಹದಲ್ಲಿ ಕಾರೊಂದು ಕೊಚ್ಚಿಕೊಂಡು ಹೋಗಿದ್ದು, ಕಾರಿನಲ್ಲಿದ್ದ ಬಾಲಕಿ ಮೃತಪಟ್ಟ ಘಟನೆ ತೊಡುಪುಳದಲ್ಲಿ ನಡೆದಿದೆ.
ಭಾರೀ ಮಳೆಯಿಂದಾಗಿ ಕೇರಳದ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರಿ ಪ್ರಮಾಣದ ನೀರು ಅಣೆಕಟ್ಟುಗಳಿಗೆ ಹರಿದು ಬರುತ್ತಿವೆ.
ತಿರುವನಂತಪುರಂನಲ್ಲಿ, ತುರ್ತು ಉದ್ದೇಶಗಳಿಗಾಗಿ ಮಾತ್ರ ಜನರು ತಮ್ಮ ಪ್ರಯಾಣವನ್ನು ಸೀಮಿತಗೊಳಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ನದಿ, ಸಮುದ್ರಕ್ಕೆ ಇಳಿಯದಂತೆ ನಿಷೇಧಿಸಲಾಗಿದೆ. ತಿರುವನಂತಪುರಂ ಜಿಲ್ಲಾಧಿಕಾರಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರಸಿದ್ಧ ಪೊನ್ಮುಡಿ ಗಿರಿಧಾಮಕ್ಕೆ ಪ್ರವೇಶವನ್ನು ನಿಷೇಧಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement