ರಾಜ್ಯದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಬಲಗೊಳಿಸುವ ಜೊತೆಗೆ ಪೊಲೀಸರ ಕಲ್ಯಾಣಕ್ಕೂ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ದಿನಗಳಲ್ಲಿ ೧೬ ಸಾವಿರ ಪೊಲೀಸ್ ಹುದ್ದೆಗಳನ್ನು ತುಂಬಲಾಗುವುದು ಎಂದಿದ್ದಾರೆ.
ಹುಬ್ಬಳ್ಳಿಯ ಹಳೇ ಸಿ.ಎ.ಆರ್. ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿದ ಅವರು, ಪೊಲೀಸರಿಗಾಗಿ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದೇವೆ. ಪೊಲೀಸರ ವೇತನ ಪರಿಷ್ಕರಿಸಿ ಅವರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ೧೬ ಸಾವಿರ ಪೊಲೀಸರ ನೇಮಕಾತಿ ಮಾಡಲಾಗುವುದು ಎಂದರು.
ಎಫ್.ಎಸ್.ಎಲ್ ಲ್ಯಾಬ್‌ಗಳನ್ನು ಪ್ರಾದೇಶಿಕ ಹಂತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. “ಆಫೀಸರ್ ಆನ್ ಕ್ರೈಮ್” ಹುದ್ದೆಗಳನ್ನು ಸೃಜಿಸಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ.ಪೊಲೀಸರ ಕಲ್ಯಾಣಕ್ಕೂ ಕಾರ್ಯಕ್ರಮ ರೂಪಿಸಲಾಗಿದ್ದು, ಈಗಾಗಲೇ ೧೦ ಸಾವಿರ ಪೊಲೀಸ್ ವಸತಿ ಗೃಹ ನಿರ್ಮಿಸಲಾಗಿದೆ. ಮುಂದಿನ ವರ್ಷದಲ್ಲಿ ೧೧ ಸಾವಿರ ಮನೆ ನಿರ್ಮಾಣಕ್ಕೆ ಯೋಜಿಸಲಾಗಿದೆ ಎಂದರು.
ಪೊಲೀಸ್ ಠಾಣೆಗಳು ಜನಸ್ನೇಹಿ ಆಗಬೇಕು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ. ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಪ್ರತಿ ಕಾಲೇಜಿನಲ್ಲಿ ಹೆಣ್ಣುಮಕ್ಕಳಿಗೆ ಸ್ವರಕ್ಷಣೆಗೆ ತರಬೇತಿ ನೀಡುವ ಕಾರ್ಯಕ್ರಮ ಜಾರಿ ಮಾಡುತ್ತೇವೆ ಎಂದರು.
ಇಲಾಖೆಯಲ್ಲಿ ನೆನೆಗುದಿಗೆ ಬಿದ್ದ ಹಲವು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಪೊಲೀಸ್ ಸೇವೆ ಉತ್ತಮಗೊಳಿಸಲು ಪ್ರಯತ್ನ ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಹಂತದಲ್ಲಿ ಮಾತ್ರ ಪದೋನ್ನತಿ ಎಂಬ ಭಾವನೆ, ಕೆಳ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಇತ್ತು. ಆದರೆ ಕೆಳ ಹಂತದ ಸಿಬ್ಬಂದಿಗೆ ಪದೋನ್ನತಿ ನೀಡಲಾಗಿದೆ ಎಂದರು.
ಪೊಲೀಸ್ ಆಯುಕ್ತ ಲಾಬೂರಾಮ್ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿದರು. ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಈರಣ್ಣ ಜಡಿ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನೈರುತ್ಯ ರೈಲ್ವೇ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕುಮಾರ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಆರ್.ಪಿ.ಎಫ್ ಐಜಿಪಿ ಅಲೋಕ್ ಕುಮಾರ್, ಉಪ ಪೊಲೀಸ್ ಆಯುಕ್ತ ರಾಮರಾಜನ್, ಸಂಚಾರ ಸಹಾಯಕ ಪೊಲೀಸ್ ಆಯುಕ್ತ ಎಂ.ಎಸ್.ಹೊಸಮನಿ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement