ಟೀಮ್ ಇಂಡಿಯಾ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ (Rahul Dravid) ನೇಮಕಗೊಂಡಿದ್ದಾರೆ.
ಬುಧವಾರ ನಡೆದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅವರು ನ್ಯೂಜಿಲೆಂಡ್ ವಿರುದ್ಧ ಸರಣಿಯೊಂದಿಗೆ ದ್ರಾವಿಡ್ ಟೀಮ್ ಇಂಡಿಯಾ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಿಸಿಸಿಐನ ಗೌರವ ಕಾರ್ಯದರ್ಶಿ ಜಯ್ ಶಾ, ರಾಹುಲ್ ದ್ರಾವಿಡ್‌ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ಸಂತೋಷವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಎರಡು ವಿಶ್ವಕಪ್‌ಗಳು ನಡೆಯಲಿದ್ದು, ಇದಕ್ಕಾಗಿ ಉತ್ತಮ ತಂಡವನ್ನು ರೂಪಿಸಬೇಕಿದೆ. ಇದಕ್ಕೆ ರಾಹುಲ್ ದ್ರಾವಿಡ್ ಸೂಕ್ತ ವ್ಯಕ್ತಿ. ಅವರ ಸಾರಥ್ಯದಲ್ಲಿ ಭಾರತ ತಂಡವು ಎಲ್ಲಾ ಮಾದರಿಗಳಲ್ಲಿ ಪ್ರಾಬಲ್ಯ ಸಾಧಿಸುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಮಂಡಳಿಯು ಶೀಘ್ರದಲ್ಲೇ ಇತರ ಕೋಚಿಂಗ್ ಸಿಬ್ಬಂದಿಯ ನೇಮಕಾತಿಗಳನ್ನು ಮಾಡಲಿದೆ ಎಂದು ತಿಳಿಸಿದ್ದಾರೆ.
ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕವನ್ನು ನಾನು ಸ್ವಾಗತಿಸುತ್ತೇನೆ. ರಾಹುಲ್ ಅತ್ಯುತ್ತಮ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ಮುಖ್ಯಸ್ಥರಾಗಿ ಭಾರತೀಯ ಕ್ರಿಕೆಟ್‌ಗೆ ಸೇವೆ ಸಲ್ಲಿಸಿದ್ದಾರೆ. ಎನ್‌ಸಿಎಯಲ್ಲಿ ರಾಹುಲ್ ಅವರ ಪ್ರಯತ್ನವು ಹಲವಾರು ಯುವ ಕ್ರಿಕೆಟ್ ಪ್ರತಿಭೆಗಳನ್ನು ಬೆಳೆಸಿದೆ. ಅವರು ಅಂತಾರರಾಷ್ಟ್ರೀಯ ಮಟ್ಟದಲ್ಲಿ ದೀರ್ಘಕಾಲ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರ ಹೊಸ ಕಾರ್ಯವು ಭಾರತೀಯ ಕ್ರಿಕೆಟ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ಭರವಸೆ ನನಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ದ್ರಾವಿಡ್, ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ದೊಡ್ಡ ಜವಾಬ್ದಾರಿ. ಶಾಸ್ತ್ರಿ ಅವರ ಅಡಿಯಲ್ಲಿ, ತಂಡವು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಇದನ್ನು ಮುಂದಕ್ಕೆ ಕೊಂಡೊಯ್ಯಲು ತಂಡದೊಂದಿಗೆ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ, ನ್ಯಾಶನಲ್‌ ಕ್ರಿಕೆಟ್‌ ಅಕಾಡೆಮಿ (NCA), U-19 ಮತ್ತು ಇಂಡಿಯಾ ಎ ತಂಡಗಳಲ್ಲಿ ನಾನು ಕಾರ್ಯ ನಿರ್ವಹಿಸಿದ್ದೇನೆ. ಮುಂದಿನ ಎರಡು ವರ್ಷಗಳಲ್ಲಿ ಪ್ರಮುಖ ಟೂರ್ನಿಗಳಿವೆ. ಈ ಟೂರ್ನಿಗಾಗಿ ತಂಡದೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ದ್ರಾವಿಡ್ ತಿಳಿಸಿದ್ದಾರೆ.
ಟಿ 20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರ ಕಾರ್ಯಾವಧಿ ಮುಗಿಯಲಿದೆ. ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಬೇಕಿದ್ದು, ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಕೆಲಸ ಶುರುವಾಗಲಿದೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement