ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು,: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಈ ಹಿನ್ನೆಲೆ ಎರಡು ದಿನ ರಾಜ್ಯದ ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡು ಕರಾವಳಿಯಲ್ಲಿ ಸುಳಿಗಾಳಿ ನಿರ್ಮಾಣವಾಗಿ ಭಾರೀ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಸೋಮವಾರ ಸಹಿತ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು ನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾ ಮಾನ ಇಲಾಖೆ ನವೆಂಬರ್ 11ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಡ್ಯಾಂಗಳಲ್ಲಿ ಒಳಹರಿವಿನಲ್ಲಿಯೂ ಏರಿಕೆ ಯಾಗಿದೆ. ಕೆಆರ್‍ಎಸ್‍ಗೆ 10,570 ಕ್ಯೂಸೆಕ್, ತುಂಗಭದ್ರಾಕ್ಕೆ 11,445, ಭದ್ರಾಕ್ಕೆ 2,354, ಹೇಮಾವತಿಗೆ 3,602 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನ.11-12 ರಂದು ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಪೂರ್ವ ಅರಬ್ಬಿ ಸಮುದ್ರದ ಮಧ್ಯದಲ್ಲಿ ಕೂಡ ಸೃಷ್ಟಿಯಾಗಿರುವ ಪ್ರಬಲ ವಾಯುಭಾರ ಕುಸಿತವು ಪಶ್ಚಿಮ ದಿಕ್ಕಿನ ಮಾರ್ಗವಾಗಿ ಹಾದು ರಾಜ್ಯದ ಕರಾವಳಿ ಸಮೀಪಿಸಿದೆ. ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಹಿಂಗಾರು ಕ್ಷೀಣಿಸಿದ ಪರಿಣಾಮ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement