ರಾಜ್ಯದಲ್ಲಿ ಮಳೆ ಹಾನಿ: ಸಿಎಂ ಬೊಮ್ಮಾಯಿಗೆ ದೂರವಾಣಿ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಎಡೆಬಿಡದೆ ಕೆಲ ದಿನಗಳಿಂದ ಸುರಿದ ಭಾರಿ ಮಳೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಮಾತನಾಡಿದ್ದು, ಮಳೆ ಅನಾಹುತಗಳ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ರಾಜ್ಯಕ್ಕೆ ಎಲ್ಲ ನೆರವು ನೀಡುವ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿನ ಮಳೆ ಅನಾಹುತದ ಬಗ್ಗೆ ಇಂದು(ಮಂಗಳವಾರ) ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿ ಎಲ್ಲ ವಿವರಗಳನ್ನು ಪಡೆದುಕೊಂಡರು ಹಾಗೂ ಕೇಂದ್ರದಿಂದ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಳೆಹಾನಿ ಪ್ರದೇಶಗಳ ಭೇಟಿಗೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಕರೆ ಮಾಡಿ ರಾಜ್ಯದ ಮಳೆ ಸ್ಥಿತಿಗತಿ, ಪ್ರವಾಹದ ಪರಿಸ್ಥಿತಿ ಬಗ್ಗೆ ಮಾತನಾಡಿ ಆಗಿರುವ ಬೆಳೆ ನಷ್ಟ, ಸಾವು-ನೋವುಗಳ ಮಾಹಿತಿ ಪಡೆದುಕೊಂಡರು ಎಂದರು.
ಮಳೆಯಿಂದ ತೊಂದರೆಗೆ ಸಿಲುಕಿರುವ ರಾಜ್ಯಕ್ಕೆ ಏನೆಲ್ಲ ನೆರವು ಬೇಕೋ ಅದನ್ನೆಲ್ಲ ಒದಗಿಸುವ ಭರವಸೆ ನೀಡಿದ್ದಾರೆ. ಪ್ರಧಾನಿಗಳ ದೂರವಾಣಿ ಮಾಡಿದ ಬೆನ್ನಲ್ಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ದೂರವಾಣಿ ಕರೆ ಮಾಡಿ ಮಳೆ ಹಾನಿ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡು ಅಗತ್ಯ ನೆರವಿನ ಭರವಸೆ ನೀಡಿದರು ಎಂದು ತಿಳಿಸಿದರು.
ರಾಜ್ಯಕ್ಕೆ ಅಗತ್ಯವಿರುವ ನೆರವಿನ ಬಗ್ಗೆ ಸದ್ಯಕ್ಕೆ ಕೇಂದ್ರಕ್ಕೆ ಯಾವುದೇ ಪ್ರಸ್ತಾವವನ್ನು ರಾಜ್ಯ ಸರ್ಕಾರ ಸಲ್ಲಿಸಿಲ್ಲ. ನಷ್ಟದ ಅಂದಾಜನ್ನು ಪೂರ್ಣ ಪ್ರಮಾಣದಲ್ಲಿ ನಡೆಸಿದ ನಂತರ ವರದಿ ಸಿದ್ಧಪಡಿಸಿ ಕೇಂದ್ರದ ಮುಂದೆ ಪರಿಹಾರಕ್ಕಾಗಿ ಬೇಡಿಕೆ ಇರಿಸಲಾಗುವುದು ಎಂದು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ