ಕರ್ನಾಟಕದಲ್ಲಿ ನವೆಂಬರ್ 30ರ ವರೆಗೂ ಮಳೆ ಸಾಧ್ಯತೆ: ಸಚಿವ ಆರ್.ಅಶೋಕ್

posted in: ರಾಜ್ಯ | 0

ಹಾಸನ: ಕರ್ನಾಟಕದಲ್ಲಿ ನವೆಂಬರ್ 30ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದಲ್ಲಿ ನವಂಬರ್ 30ರ ವರೆಗೂ ಸಹ ಮಳೆ ಮುಂದುವರಿಯಲಿದೆ. ಆದ್ದರಿಂದ ಅಗತ್ಯ ಕ್ರಮಕ್ಕೆ ಮುಂದಾಗುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ. ರೈತರು ಸಹ ಹವಾಮಾನದ ವೈಪರೀತ್ಯವನ್ನು ಗಮನಿಸಿ ಬೆಳೆ ಕೊಯ್ಲು ಹಾಗೂ ಬೆಳೆ ಸಂರಕ್ಷಣೆಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ವಿಪರೀತ ಮಳೆಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಹಾನಿ ಸಂಭವಿಸಿದ್ದು ತ್ವರಿತಗತಿಯಲ್ಲಿ ಪರಿಹಾರ ವಿತರಣೆಗೆ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ. ಬೆಳೆ ಹಾನಿ ಪರಿಹಾರಕ್ಕೆ ಈಗಾಗಲೇ 300 ಕೋಟಿ ರೂ.ಗಳಷ್ಟು ಪರಿಹಾರ ವಿತರಣೆ ಮಾಡಲಾಗಿದ್ದು, ನಿನ್ನೆ ಸಹ 68 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದರು.
ಹಾಸನ ಜಿಲ್ಲೆಯಲ್ಲಿ 47,022 ಹೆಕ್ಟೇರ್ ಬೆಳೆಹಾನಿ, 310 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸುಮಾರು 100 ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಾಶವಾಗಿದ್ದು ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅಲ್ಲದೇ ಕೇಂದ್ರ ಸರ್ಕಾರಕ್ಕೆ ಎಮ್ ಡಿ ಆರ್ ಎಫ್ ನಿಯಮದಡಿ ನೀಡುತ್ತಿರುವ ಹೆಕ್ಟೇರ್ ಗೆ 6,800 ಪರಿಹಾರವನ್ನು ಹೆಚ್ಚಿಸಬೇಕು ಎಂದು ಈಗಾಗಲೇ ಪ್ರಧಾನಿ ಅವರಿಗೆ ಪತ್ರ ಮುಖೇನ ಮನವಿ ಮಾಡಲಾಗಿದೆ. ಮೂರು ಪಟ್ಟು ಪರಿಹಾರ ಏರಿಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ