ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ನಾಗೇಶ

ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುರಾಜ್ಯದಲ್ಲಿ ಒಂದು ವೇಳೆ ಕೋವಿಡ್ ಸೋಂಕು ಹೆಚ್ಚಾದರೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರದ ಮೇಲೆ ಶಾಲೆಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕಂತೂ ಈ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಈವರೆಗೂ ತಾಂತ್ರಿಕ ಸಮಿತಿ ಯಾವುದೇ ಗಾಬರಿ ವರದಿ ನೀಡಿಲ್ಲ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದ ಕೆಲವು ಕಡೆ ಶಾಲೆಗಳಲ್ಲಿ ಮಕ್ಕಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸರ್ಕಾರ ಸಂಪೂರ್ಣ ಜವಾಬ್ದಾರಿಯಿಂದ ಎಲ್ಲವನ್ನೂ ಗಮನಿಸುತ್ತಿದೆ. ಪೋಷಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.
ಸರ್ಕಾರ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಅರ್ಧ ಗಂಟೆಗೊಮ್ಮೆ ಎಲ್ಲ ಡಿಡಿಪಿಐಗಳಿಂದ ಮಾಹಿತಿ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.
ಶಾಲೆಗಳಿಗೆ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ಈ ಬಗ್ಗೆ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜತೆಗೆ ಶಾಲಾ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡುವ ಕುರಿತು ಸಹ ಆದೇಶಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರವೂ ಕಾಳಜಿ ವಹಿಸಿದೆ. ವಿನಾ ಕಾರಣ ಪೋಷಕರು ಗಾಬರಿಯಾಗುವುದು ಬೇಡ ಎಂದರು.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement