ಕೃಷಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಸಂಸತ್‌ನಲ್ಲಿ ಲಿಖಿತ ಉತ್ತರ ನೀಡಿದ್ದಾರೆ.
ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ ನಂತರ ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಅವರುಉ ಪ್ರತಿಭಟನೆ ನಡೆಸುತ್ತಿದ್ದಾಗ ಮರಣ ಹೊಂದಿದ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.
2020ರ ನವೆಂಬರ್ ತಿಂಗಳಿನಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಸಿಂಘು, ಟಿಕ್ರಿ ಮತ್ತು ಘಾಜಿಪುರ್ ಗಡಿಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ 700ಕ್ಕೂ ಅಧಿಕ ರೈತರು ಮೃತಪಟ್ಟಿದ್ದಾರೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಪ್ರತಿಭಟನೆ ವೇಳೆ ಹವಾಮಾನ ವೈಪರೀತ್ಯ, ಅನಾರೋಗ್ಯ ಮತ್ತು ಆತ್ಮಹತ್ಯೆಯಿಂದ ರೈತರ ಸಾವು ಸಂಭವಿಸಿತ್ತು ಎಂದು ವರದಿ ತಿಳಿಸಿದೆ. ರೈತರ ಒತ್ತಡಕ್ಕೆ ಮಣಿದು ಮೂರು ಕೃಷಿ ಕಾಯ್ದೆ ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಬಳಿಕ ನವೆಂಬರ್ 29ರಂದು ಸಂಸತ್ ಚಳಿಗಾಲದ ಅಧಿವೇಶನ ಆರಂಭವಾದ ಮೊದಲ ದಿನವೇ ವಿಪಕ್ಷಗಳ ಕೋಲಾಹಲದ ನಡುವೆಯೆ ಕೃಷಿ ಕಾಯ್ದೆಯನ್ನು ರದ್ದುಪಡಿಸುವ ಮಸೂದೆ ಅಂಗೀಕಾರಗೊಂಡಿತ್ತು.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ನಾಯಕರು, ಯಾವುದೇ ಚರ್ಚೆ ಇಲ್ಲದೇ ಕೃಷಿ ಕಾಯ್ದೆಯನ್ನು ರದ್ದುಪಡಿಸಿರುವ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಮಗೆ ಎಂಎಸ್ ಪಿ ಬಗ್ಗೆ ಚರ್ಚೆಯಾಗಬೇಕಿದೆ, ಲಖೀಂಪುರ್ ಘಟನೆ ಹಾಗೂ ಪ್ರತಿಭಟನೆ ವೇಳೆ ಮೃತಪಟ್ಟ 700 ರೈತರ ಸಾವಿನ ಕುರಿತು ಕಲಾಪದಲ್ಲಿ ಚರ್ಚೆ ನಡೆಸಬೇಕಾಗಿದೆ. ಆದರೆ ಕಲಾಪದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement