
ಬೆಂಗಳೂರು: ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುತ್ತಿದ್ದಂತೆ ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ.
ಈಗ ಓಮಿಕ್ರಾನ್ ನಿಯಂತ್ರಣ ಮಾಡಲು ಮತ್ತೆ ಮಾರ್ಗಸೂಚಿಗಳನ್ನು ಜಾರಿ ಮಾಡಲು ನಿರ್ಧರಿಸಿದ್ದು, ದಂಡ ಪ್ರಯೋಗಕ್ಕೆ ಮತ್ತೆ ಜಾರಿಗೆ ತರಲು ಚಿಂತಿಸಿದ್ದು, ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ. ಮತ್ತು ಹಳ್ಳಿಗಳಲ್ಲಿ 100 ರೂ. ದಂಡ ಪ್ರಯೋಗಿಸಲು ನಿರ್ಧರಿಸಿದೆ.
ಕೋವಿಡ್ ಹೆಚ್ಚುತ್ತಿರುವುದನ್ನು ತಡೆಯಲು ರಾಜ್ಯ ಸರ್ಕಾರ, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಶುಕ್ರವಾರ ಕೃಷ್ಣಾದಲ್ಲಿ ಉನ್ನತಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಹೊಸ ಮಾರ್ಗಸೂಚಿ ಪ್ರಕಾರ, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸಾರ್ವಜನಿಕ ಪ್ರದೇಶಗಳ ಬಳಕೆಗೆ ಡಬಲ್ ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ.
ಇದರೊಂದಿಗೆ ಮಾಸ್ಕ್ ಹಾಕದಿದ್ದರೆ ದಂಡ ವಿಧಿಸುವ ಕ್ರಮ ಮತ್ತೆ ಆರಂಭ ಆಗುತ್ತಿದೆ. ಸದ್ಯಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕ್ರಮಗಳನ್ನು ತೆಗೆದುಕೊಳ್ಳದಿರಲು ಸರ್ಕಾರ ನಿರ್ಧರಿಸಿದೆ.
ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ ಲಘು ಲಕ್ಷಣಗಳು ಕಂಡುಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ