ನಾಳೆ ವಿಧಾನ ಪರಿಷತ್ತಿನ ೨೫ ಸ್ಥಾನಗಳಿಗೆ ಚುನಾವಣೆ: 90 ಅಭ್ಯರ್ಥಿಗಳ ಹಣೆಬರಹ ನಿರ್ಧಾರ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ೨೫ ಸ್ಥಾನಗಳಿಗೆ ನಾಳೆ, ಶುಕ್ರವಾರ ನಡೆಯುವ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೊನೆ ಕ್ಷಣದ ಕಸರತ್ತು ನಡೆಸಿವೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ೨೦ ಕ್ಷೇತ್ರಗಳ ೨೫ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿರುವ ೯೦ ಅಭ್ಯರ್ಥಿಗಳ ರಾಜಕೀಯ ಭವಿಷ್ಯಕ್ಕೆ ನಾಳೆ ಮತದಾರ ಮುದ್ರೆ ಒತ್ತಲಿದ್ದಾನೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾಳೆ ಬೆಳಿಗ್ಗೆ ೮ ರಿಂದ ಸಂಜೆ ೪ ಗಂಟೆ ವರೆಗೆ ಮತದಾನ ನಡೆಯಲಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಲಾ ೨೦ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ ೬ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಉಳಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಈ ಚುನಾವಣೆಯಲ್ಲಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಏಕೈಕ ಮಹಿಳಾ ಅಭ್ಯರ್ಥಿಯಾಗಿದ್ದು, ಉಳಿದಂತೆ ಪುರುಷ ಅಭ್ಯರ್ಥಿಗಳೇ ಪಾರಮ್ಯ ಮೆರೆದ್ದಾರೆ.
ರಾಜ್ಯಾದ್ಯಂತ ೬೦೭೨ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಎಎಲ್ಲ ಮತಗಟ್ಟೆಗಳಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ. ಮತಗಟ್ಟೆಯ ಸುತ್ತ ೨೦೦ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.ಮತದಾನ ನಡೆಯುವ ಜಿಲ್ಲೆಗಳಲ್ಲಿ ಎರಡು ದಿನ ಮದ್ಯ ಮಾರಾಟಕ್ಕೂ ನಿರ್ಬಂಧ ಹೇರಲಾಗಿದೆ. ಈ ಚುನಾವಣೆಯಲ್ಲಿ ಒಟ್ಟು ೯೯,೦೬೨ ಅರ್ಹ ಮತದಾರರಿದ್ದು, ಪುರುಷ ಮತದಾರರ ಸಂಖ್ಯೆ ೪೭,೨೦೫, ಮಹಿಳಾ ಮತದಾರರ ಸಂಖ್ಯೆ ೫೧,೮೫೪, ಈ ಚುನಾವಣೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯತ, ಪುರಸಭೆ ನಗರಸಭೆ, ನಗರಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾರರಾಗಿದ್ದಾರೆ.
ಈ ಚುನಾವಣೆಗೆ ಅಭ್ಯರ್ಥಿಗಳ ವೆಚ್ಚ ನಿಯಂತ್ರಣ ಇಲ್ಲದ ಕಾರಣ ಬಹುತೇಕ ಕ್ಷೇತ್ರಗಳಲ್ಲಿ ಹಣದ ಮೇಲೆಯೇ ಚುನಾವಣೆ ನಡೆದಿದ್ದು, ಕೆಲವೆಡೆ ಅಭ್ಯರ್ಥಿಗಳು ಪ್ರತಿ ಮತಕ್ಕೆ ಭಾರೀ ಹಣ ವೆಚ್ಚ ಮಾಡುತ್ತಿದ್ದಾರೆ ಎಂದು ಹೇಳಲಾಗಿದ್ದು, ಕಾಂಚಣವೇ ಸದ್ದು ಮಾಡುತ್ತಿದೆ.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳ ಪ್ರಮುಖ ನಾಯಕರು ಕಳೆದ ೧೫ ದಿನಗಳಿಂದ ಪ್ರಚಾರ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement