ಕನ್ನಡ ಕಡ್ಡಾಯ: ಮುಂದಿನ ವಿಚಾರಣೆ ವರೆಗೆ ಒತ್ತಾಯದ ಕ್ರಮ ಬೇಡ, ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಕನ್ನಡವನ್ನು ಒಂದು ಭಾಷೆಯಾಗಿ ಪದವಿ ಹಂತದಲ್ಲಿ ಕಡ್ಡಾಯವಾಗಿ ಕಲಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ವಿಚಾರಣೆಯವರೆಗೆ ಯಾವುದೇ ಒತ್ತಾಯಪೂರ್ವಕ ಕ್ರಮ ಅನುಸರಿಸದಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಸೋಮವಾರ ಸೂಚಿಸಿದೆ.
ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವ ಟ್ರಸ್ಟ್‌, ವ್ಯೋಮಾ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಮನವಿಯು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಹಿಂದಿನ ವಿಚಾರಣೆ ವೇಳೆ ಪೀಠವು, ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿರುವ ಮನವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ನಿಲುವು ಸ್ಪಷ್ಟಪಡಿಸಿ ಅಫಿಡವಿಟ್‌ ಸಲ್ಲಿಸಬೇಕು ಎಂದು ಸೂಚಿಸಿತ್ತು. ಆದರೆ, ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ (ಎಎಸ್‌ಜಿ) ಎಂ. ಬಿ. ನರಗುಂದ ಅವರು ಕೇಂದ್ರ ಸರ್ಕಾರದಿಂದ ಸೂಚನೆ ಪಡೆದು ಮಾಹಿತಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶದ ಅಗತ್ಯವನ್ನು ಕೋರಿದರು.
ಈ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯವರೆಗೆ ಕನ್ನಡ ಕಲಿಕೆಗೆ ಸಂಬಂಧಿಸಿದಂತೆ ಯಾವುದೇ ಒತ್ತಾಯಪೂರ್ವಕ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ನಿರ್ದೇಶಿಸಿದ ಪೀಠವು ಪ್ರಕರಣವನ್ನು ಡಿ.16ಕ್ಕೆ ಮುಂದೂಡಿತು. ಮುಂದಿನ ವಿಚಾರಣೆ ವೇಳೆಗೆ ಕೇಂದ್ರದಿಂದ ಮಾಹಿತಿ ಪಡೆದು ಅಫಿಡವಿಟ್‌ ಸಲ್ಲಿಸುವಂತೆ ಎಎಸ್‌ಜಿ ಅವರಿಗೆ ಸೂಚಿಸಿತು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement