ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ, ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
.ಅವರು ಗುರುವಾರ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಈ ಬಗ್ಗೆ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಅದನ್ನು ಆಧರಿಸಿ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು. ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement