ಖಾಸಗಿ ಶಾಲೆಗಳಿಗೆ ವೇತನಾನುದಾನಕ್ಕೆ ಪರಿಶೀಲಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪರಿಷತ್ ಸಭಾಪತಿ ಬಸವರಾಜ.ಎಸ್ .ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಅನುದಾನಿತ , ಅನದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 30ರ ಒಳಗಾಗಿ 1995 ಕ್ಕೂ ಮುನ್ನ ಸ್ಥಾಪಿಸಿದ ಖಾಸಗಿ ಶಾಲೆಗಳನ್ನು ಸರ್ಕಾರದ ಸಹಾಯಧನಕ್ಕೆ ಒಳಪಡಿಸಲು ಹಣಕಾಸು ಇಲಾಖೆಗೆ ಸೂಕ್ತ ದಾಖಲೆ ಹಾಗೂ ಅಂಕೆ ಸಂಖ್ಯೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಹಾಗೂ ರಾಜ್ಯದಲ್ಲಿ ಶಾಶ್ವತ ಅನುದಾನ ರಹಿತ ಖಾಸಗಿ ಶಾಲೆಗಳಿವೆ. ಹಣಕಾಸು ಪರಿಸ್ಥಿತಿ ಸುಧಾರಿಸಿದರೆ ಇವುಗಳಿಗೂ ಸಹ ಸಹಾಯಧನ ನೀಡಲಾಗುವುದು ಎಂದರು.
ಶಿಕ್ಷಣ ಇಲಾಖೆಯಲ್ಲಿ 1997-98 ನೇ ಸಾಲಿನಲ್ಲಿ ಗುತ್ತಿಗೆ ಆಧಾರದ ಮೇಲೆ ಡಿ.ಪಿ.ಇ.ಪಿ.ಯೋಜನೆಯಡಿ ನೇಮಕೊಂಡ 150 ಸಿಬ್ಬಂದಿಯನ್ನು ಸಕ್ರಮಗೊಳಿಸುವ ಕುರಿತಂತೆ ಕಾನೂನಾತ್ಮಕ ವಿಷಯಗಳನ್ನು ಪರಿಶೀಲಿಸಿ ಕಾಯಂಮಾತಿಗೆ ಕ್ರಮಕೈಗೊಳ್ಳುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ಪ್ರಾಥಮಿಕ ಮತ್ತು‌ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಅನುದಾನಿತ ಶಾಲೆಗಳ 500 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಜಾಹಿರಾತು ನೀತಿ ನಿಯಮ ಪಾಲನೆಯಾಗಿಲ್ಲ ಎಂದು ಶಿಕ್ಷಣ ಇಲಾಖೆ ತಡೆ ಹಿಡಿದಿದೆ ಜಾಹೀರಾತು ನೀತಿ ತನ್ನಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು
ಶಾಲಾ ಆಡಳಿತ ಮಂಡಳಿ ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದ ಒಂದೊಂದು ಪತ್ರಿಕೆಯಲ್ಲಿ ನೇಮಕಾತಿ ಕುರಿತು ಜಾಹಿರಾತು ನೀಡಿವೆ. ಆದರೆ ಪ್ರತಿಕೆಗಳ ರಾಜ್ಯಪುಟಗಳಲ್ಲಿವೇ ಜಾಹಿರಾತು ಪ್ರಕಟವಾಗಬೇಕು ಎಂದು ಅಧಿಕಾರಿಗಳು ಕಡ್ಡಾಯ ಮಾಡಿ ನೇಮಕಾತಿಗೆ ತಡೆ ನೀಡಿದ್ದಾರೆ. ಇದನ್ನು ತಕ್ಷಣವೇ ಸರಿ ಪಡಿಸಬೇಕು ಎಂದು ತಿಳಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪತ್ರಿಕೆಗಳಲ್ಲಿ ನೇಮಕಾತಿ ಜಾಹಿರಾತು ನೀಡಿರುವ ಶಾಲಾ ಆಡಳಿತ ಮಂಡಳಿಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಯಲು ಅನುಮತಿ ನೀಡಿ. ಇಂತಹದೇ ಪುಟದಲ್ಲಿ ಜಾಹಿರಾತು ಬರಬೇಕು ಎಂಬ ನಿಯಮವಿಲ್ಲ. ಯಾವುದೇ ಪುಟದಲ್ಲಿ ಜಾಹಿರಾತು ಪ್ರಕಟಗೊಂಡರೂ ಪರಿಗಣಿದಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement