ದೇಶದ ಖ್ಯಾತ ಯಾತ್ರಾ ಸ್ಥಳ ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು, 14 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾ ಸ್ಥಳ ಮಾತಾ ವೈಷ್ಣೋದೇವಿ ಮಂದಿರದಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 12 ಮಂದಿ ಭಕ್ತರು ಮೃತಪಟ್ಟಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರುವ ಸಂಭವವಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪರಿಸ್ಥಿತಿಯನ್ನು ‘ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಟ್ರ್ಯಾಕ್ ಮಾಡುತ್ತಿದ್ದಾರೆ’ ಎಂದು ಅವರ ಕಚೇರಿಯ ಸಚಿವರೊಬ್ಬರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ವರ್ಷಾಚಣೆಗೆಂದು ಭಕ್ತರು ಭಾರೀ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಜಮಾವಣೆಗೊಂಡಿದ್ದರು. ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರದತ್ತ ನುಗ್ಗಿದ್ದರಿಂದ ಈ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಹೊಸ ವರ್ಷದ ಕಾರಣ ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ಭವನವನ್ನು ಪ್ರವೇಶಿಸಿದಾಗ ನೂಕುನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಂಡಿದ್ದಾರೆ.
ಮಾತಾ ವೈಷ್ಣೋ ದೇವಿ ಭವನದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಜಮ್ಮುಮತ್ತು ಕಾಶ್ಮೀರ ಸರ್ಕಾರವು ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರಾರ್ಥವಾಗಿ ತಲಾ 10 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ. ಜೊತೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ಜಮ್ಮುಮತ್ತು ಕಾಶ್ಮೀರ ಸರ್ಕಾರದಿಂದ ₹ 2 ಲಕ್ಷ ರೂಪಾಯಿ ಮತ್ತು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಪ್ರಕಟಿಸಲಾಗಿದೆ.
ಒಂದು ಮಾಹಿತಿಯ ಪ್ರಕಾರ ವೈಷ್ಣೋದೇವಿ ಪುಣ್ಯಕ್ಷೇತ್ರದಲ್ಲಿ ಮಾತಾ ವೈಷ್ಣೋದೇವಿ ಭವನದ ಬಳಿ ಬೆಳಗಿನ ಜಾವ 2: 45ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಭವನದಲ್ಲಿ ಜಮಾಯಿಸಿದ್ದ ಜನರ ನಡುವೆ ಗಲಾಟೆ ಶುರುವಾಗಿದೆ. ಮಾತಿಗೆ ಮಾತು ಬೆಳೆದು ತಳ್ಳಾಟ ಜೋರಾಗಿದೆ. ಮುಂದೆ ಅದು ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement