ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸೂಚಿಸಿದ್ದಾರೆ.
ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು, ಗುರುವಾರ ಮಧ್ಯಾಹ್ನ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿರುವ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.
ಎರಡು ದಿನಗಳ ಕಾಲ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕ ಪ್ರಕರಣ ಸೂಕ್ಷ್ಮವಿರುವ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು.
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು, ಹಿಜಾಬ್ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ವಿವಾದ ಕಾರಣದಿಂದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಹೇಳಿದರು.


ನಿಮ್ಮ ಕಾಮೆಂಟ್ ಬರೆಯಿರಿ