ಅಸಾನಿ ಚಂಡ ಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅಸಾನಿ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಅದರ ಪ್ರಭಾವದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 20ರಂದು ಭಾರತದ ಕೆಲ ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡು, ಕರ್ನಾಟಕದ ಕೆಲವೆಡೆ ಮಳೆ ಬಿದ್ದಿದ್ದು, ನಾಳೆಯಿಂದ ಇನ್ನಷ್ಟು ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರಕ್ಕೆ ಹೊಂದಿಕೊಂಡಂತೆ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಮತ್ತು ಉತ್ತರಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಅಸಾನಿ ಚಂಡಮಾರುತವನ್ನು ಎದುರಿಸಲು ಸಿದ್ಧತೆಗಳು ನಡೆದಿವೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎನ್​ಡಿಆರ್​ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾ.20ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮಾ.20ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಾ.20 ಮತ್ತು ಮಾ.21ರಂದು ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಾ.20ರಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement