ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ವಿರುದ್ಧದ ನಿರ್ಣಯ ಕಾನೂನುಬಾಹಿರ: ಸಿಎಂ ಬೊಮ್ಮಾಯಿ

ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಕಸಿದುಕೊಳ್ಳುವ ಇದು ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡು ನಿರ್ಣಯವನ್ನು ಸರ್ಕಾರ ಹಾಗೂ ಕರ್ನಾಟಕದ ಜನತೆ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ. ಕಾವೇರಿ ನ್ಯಾಯಾಧೀಕರಣ ಅನ್ವಯ ತಮಿಳುನಾಡಿಗೆ 177. 25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ‌ ನೀಡಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ನಿರ್ಣಯ
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತು ಕರ್ನಾಟಕ ತೆಗೆದುಕೊಂಡ ನಿರ್ಧಾರದ ವಿರುದ್ಧ ತಮಿಳು ನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.
ಇದಕ್ಕೆ ಪ್ರತಿಪಕ್ಷಗಳಾದ ಎಐಎಡಿಎಂಕೆ ಹಾಗೂ ಬಿಜೆಪಿಯೂ ಬೆಂಬಲಿಸಿದೆ. ಸಚಿವ ದೊರೈ ಮುರುಗನ್‌ ಅವರು ನಿರ್ಣಯ ಮಂಡಿಸಿದ್ದಲ್ಲದೆ, ಅಣೆಕಟ್ಟು ನಿರ್ಮಿಸಲು ಕರ್ನಾಟಕ ರಾಜ್ಯ ಸರಕಾರಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement