ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಕೆ. ಎನ್‌. ಫಣೀಂದ್ರ ನೇಮಕ

ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಎರಡನೇ ಉಪ ಲೋಕಾಯುಕ್ತ ಹುದ್ದೆಗೆ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರ ನೇಮಕಗೊಂಡಿದ್ದಾರೆ.
ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲರು ಸೋಮವಾರ ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದು, ಮಂಗಳವಾರ ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಸುಮಾರು ಒಂದು ವರ್ಷದಿಂದ ಈ ಹುದ್ದೆ ಖಾಲಿ ಇತ್ತು.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಪರಿಷತ್‌ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾ. ಕೆ ಎನ್‌ ಫಣೀಂದ್ರ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದರು.

2020ರ ಡಿಸೆಂಬರ್‌ 16ರಂದು ನಿವೃತ್ತ ನ್ಯಾ. ಎನ್‌ ಆನಂದ್‌ ಅವರು ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದ ಈ ಹುದ್ದೆ ಖಾಲಿ ಇತ್ತು. ಮತ್ತೊಂದು ಉಪ ಲೋಕಾಯುಕ್ತ ಹುದ್ದೆಯಲ್ಲಿ ನಿವೃತ್ತ ನ್ಯಾ. ಬಿ ಎಸ್‌ ಪಾಟೀಲ್‌ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರು 2022ರ ಜನವರಿ 28ರಂದು ಅಧಿಕಾರದ ಅವಧಿ ಪೂರ್ಣಗೊಳಿಸಿದ್ದು, ಸುಮಾರು ಎರಡು ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿ ಇದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement