ಅಂತಾರಾಜ್ಯ ಜಲವಿವಾದ: ಏಪ್ರಿಲ್ ನಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದ್ದು, ಈ ಬಗ್ಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದೇನೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು, ಭಾನುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದಗಳನ್ನು ಆದಷ್ಟು ಬೇಗ ಬಗೆಹರಿಸಲು ಎಲ್ಲ ಪ್ರಯತ್ನ ಮಾಡಬೇಕಿದೆ. ಕಾನೂನು ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳಿಂದ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದರು.
ಕೋವಿಡ್ ಸಾಂಕ್ರಾಮಿಕದಿಂದ ಹೊರಬಂದಿರುವುದರಿಂದ ಅಭಿವೃದ್ಧಿ ಕೆಲಸ ಈಗ ಶುರುವಾಗಿದೆ. ಯೋಜನಾಬದ್ಧವಾಗಿ ರಾಜ್ಯವನ್ನು ಅಭಿವೃದ್ಧಿಗೊಳಿಸಲು ಗಟ್ಟಿಯಾದ ಅಡಿಪಾಯ ಹಾಕಲಾಗುವುದು ಎಂದು ಹೇಳಿದರು.

ಬಂಡವಾಳ ಹೂಡಿಕೆಗೆ ಒತ್ತು
ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಕೈಗಾರಿಕೆಗೆ ಜಮೀನು ಗುರುತಿಸುವಿಕೆ, ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆ ಆಕರ್ಷಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದರು.
ಮಹಿಳೆಯರ ಸಬಲೀಕರಣಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಕೃಷಿ ಸೆಕಂಡರಿ ನಿರ್ದೇಶನಾಲಯವನ್ನು ಸ್ಥಾಪಿಸಲು ಆದೇಶ ಮಾಡಲಾಗಿದೆ. ಶೀಘ್ರ ದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದರು.
ಹುಬ್ಬಳ್ಳಿಗೆ ಸಂಬಂಧಿಸಿದಂತೆ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಮೇಲ್ವಿಚಾರಣಾ ಮಂಡಳಿಯಲ್ಲಿ ತೀರ್ಮಾನವಾಗಿದೆ. ಅದರನ್ವಯ ಆದಷ್ಟು ಬೇಗ ಸ್ಥಳ ನಿಗದಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ನಂತರ ಕಟ್ಟಡ ನಿರ್ಮಾಣ ಮಾಡಲಾಗುವುದು. ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆಯನ್ನು ಜೊತೆಜೊತೆಯಲ್ಲಿಯೇ ಪ್ರಾರಂಭಿಸಲಾಗುವುದು ಎಂದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement