ಸಚಿವ ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಗುತ್ತಿಗೆದಾರ ಆತ್ಮಹತ್ಯೆ..!

ಉಡುಪಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ‌ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆಪ್ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ ಇಲ್ಲಿನ
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಅವರ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಿದಾಗ ಶಾಂಭವಿ ಲಾಡ್ಜ್‌ನಲ್ಲಿ ಸಂತೋಷ್ ಪಾಟೀಲ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್​​ ಆಯಪ್​​ ಮೆಸೇಜ್ ಕಳುಹಿಸಿ ಸಂತೋಷ್ ನಾಪತ್ತೆಯಾಗಿದ್ದರು ಎಂದು ಹೇಳಲಾಗುತ್ತಿದೆ. ವಾಟ್ಸಾಪ್ ಮೂಲಕ ಮೆಸೇಜ್ ಮಾಡಿರುವ ಸಂತೋಷ್ ನನ್ನ ಸಾವಿಗೆ ನೇರ ಕಾರಣ ಕೆಎಸ್ ಈಶ್ವರಪ್ಪ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಕ್ಕಳಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಬಿಎಸ್​ ಯಡಿಯೂರಪ್ಪನವರು ಸಹಾಯ ಹಸ್ತ ನೀಡಬೇಕು ಎಂದು ಸಂತೋಷ್ ಮಾಧ್ಯಮಕ್ಕೆ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.
ನನ್ನ ಸಾವಿಗೆ ಸ್ನೇಹಿತರು ಕಾರಣರಲ್ಲ. ಸ್ನೇಹಿತರೊಂದಿಗೆ ನಾನು ಪ್ರವಾಸದಲ್ಲಿದ್ದ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಮೆಸೇಜ್​ನಲ್ಲಿ ತಿಳಿಸಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರ ಸಂತೋಷ್ ಪತ್ರ ಬರೆದಿದ್ದ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿತ್ತು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement