ಸಚಿವ ಈಶ್ವರಪ್ಪ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿ ಬಂಧಿಸಿ: ಕಾಂಗ್ರೆಸ್ ನಾಯಕರ ಒತ್ತಾಯ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರು ನೇರ ಕಾರಣರಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡ ನಂತರ ಬೆಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ವಜಾ ಮಾಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸಕ್ಕೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದರು.

ಬಿಜೆಪಿ ಹಾಗೂ ಬಜರಂಗದಳದವರು, ಪಿಎಫ್ ಐ, ಸಿಎಫ್ ಐ ಹಾಗೂ ಎಸ್ ಡಿಪಿಐ ಜತೆ ಸೇರಿಕೊಂಡು ರಾಜ್ಯದಲ್ಲಿ ದಿನನಿತ್ಯ ಬಿಗುವಿನ ವಾತಾವರಣ ಸೃಷ್ಟಿಸುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಹುತೇಕ ಸಚಿವರು ಕಳಂಕಿತರು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ, ಮತ್ತೆ ಕೆಲವರು ಜಾಮೀನಿನ ನಿರೀಕ್ಷಣೆಯಲ್ಲಿದ್ದಾರೆ. ಅವರನ್ನು ವಜಾಗೊಳಿಸಬೇಕು. ಆದರೆ ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಡಿ.ಕೆ.ಶಿವಕುಮಾರ ಮಾತನಾಡಿ, ಆರೋಪಿ ಸಚಿವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% ಕಮಿಷನ್ ಆರೋಪ ಮಾಡಿರುವುದು ನಾವ್ಯಾರೂ ಅಲ್ಲ. ಗುತ್ತಿಗೆದಾರರ ಸಂಘ, ಗುತ್ತಿಗೆದಾರರು ಹಾಗೂ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಈ ಆರೋಪ ಮಾಡಿದ್ದಾರೆ ಎಂದು ತಿಳಿಸಿದರು.
ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರ ರಕ್ಷಣೆಯನ್ನೂ ಮಾಡಬಾರದು. ಕೂಡಲೇ ಎಫ್‌ಐಆರ್ ದಾಖಲಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕು. ಈ ಹಿಂದೆ ಸಚಿವರುಗಳ ವಿರುದ್ಧದ ಪ್ರಕರಣದಲ್ಲಿ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಬಿ ರಿಪೋರ್ಟ್ ಹಾಕಿ ರಕ್ಷಣೆ ಮಾಡಿದ್ದು, ಈ ಪ್ರಕರಣದಲ್ಲಿ ಆ ರೀತಿ ಆಗಬಾರದು ಎಂದು ಆಗ್ರಹಿಸಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement