ದೆಹಲಿಯ ಹನುಮ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಹಿಂಸಾಚಾರ

ನವದೆಹಲಿ: ಶನಿವಾರ (ಏಪ್ರಿಲ್ 16) ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಹಿಂಸಾಚಾರ ಸಂಭವಿಸಿದೆ.
ಘಟನೆಯಲ್ಲಿ ಹಲವಾರು ವಾಹನಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳದಲ್ಲೇ ಪರಿಸ್ಥಿತಿ ನಿಭಾಯಿಸಲು ಯತ್ನಿಸಿದಾಗ ಅವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದೂ ಹೇಳಲಾಗಿದೆ.

ಶಾಂತಿ ಕಾಪಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜನತೆಗೆ ಮನವಿ ಮಾಡಿದ್ದಾರೆ. “ಶಾಂತಿಯನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೆ ಇದೆ; ಶಾಂತಿ ಕಾಪಾಡಲು ಜನರಿಗೆ ಮನವಿ ಮಾಡಿ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್‌ ಆಯುಕ್ತ ದೀಪೇಂದ್ರ ಪಾಠಕ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಮತ್ತು ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪ್ರದೇಶದಲ್ಲಿ ಗಸ್ತು ಹೆಚ್ಚಿಸಲಾಗಿದೆ.
ಕಲ್ಲು ತೂರಾಟದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರೊಂದಿಗೆ ಸುಮಾರು 200 ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಬಿಜೆಪಿ ನಾಯಕ ಮನೋಜ್ ತಿವಾರಿ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ದೆಹಲಿ ಪೊಲೀಸ್ ಅಪರಾಧ ವಿಭಾಗದ ವಿಶೇಷ ಸೆಲ್ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. 10 ತಂಡಗಳನ್ನು ರಚಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement