ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು 90ನೆ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಗೌಡರು ವಿಶೇಷ ಪೂಜೆ ಸಲ್ಲಿಸಿದರು.
ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಇಂದು, ಬುಧವಾರ ಬೆಳಿಗ್ಗೆ ದೇವೇಗೌಡರ ನಿವಾಸಕ್ಕೆ ಆಗಮಿಸಿ ಶುಭಕೋರಿ ಆಶೀರ್ವದಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಗಾಯುಷ್ಯ ಹಾಗೂ ಆರೋಗ್ಯವನ್ನು ಕೋರಿ ಜನ್ಮದಿನಕ್ಕೆ ಶುಭ ಹಾರೈಸಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿಗಲಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಹಲವು ಗಣ್ಯರು ಗೌಡರಿಗೆ ಶುಭ ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದಾ ನನ್ನ ಕೈ ಹಿಡಿದು ಮುನ್ನಡೆಸಿದ ಗೌಡರು ನನ್ನ ಪಾಲಿಗೆ ತಂದೆಯಷ್ಟೆ ಅಲ್ಲ, ಗುರು, ದೈವ, ಶಕ್ತಿಯೂ ಹೌದು. ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಗೌಡರ ಸೇವೆ, ಮಾರ್ಗದರ್ಶನದ ಅಗತ್ಯವಿದೆ. ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಅಲ್ಪಕಾಲವಷ್ಟೆ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಗೌಡರು ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ಕಾಯಾ, ವಾಚಾ, ಮನಸಾ ಜನರ ಉದ್ಧಾರಕ್ಕೆ ಶ್ರಮಿಸಿರುವ ಅವರು ಭಾರತದ ರಾಜಕೀಯ ಕರ್ಮಯೋಗಿಯಾಗಿದ್ದು, 90ರ ಹರೆಯದಲ್ಲೂ ಜನಪರ ಹೋರಾಟ ನಡೆಸುತ್ತಿರುವ, ದಣಿವರಿಯದ ಕಾಯಕ ಯೋಗಿ ಎಂದು ಕುಮಾರಸ್ವಾಮಿ ಶ್ಲಾಘಿಸಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ