ಕಾಶ್ಮೀರದಲ್ಲಿ ಹಿಂದೂಗಳ ಟಾರ್ಗೆಟ್‌ ಹತ್ಯೆ: ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಭಯೋತ್ಪಾದಕರ ದಾಳಿಗಳ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಿರ್ದಿಷ್ಟ ಸಮುದಾಯದ ಮೇಲೆ ನಡೆಯುತ್ತಿರುವ ಈ ದಾಳಿಗಳು ಅತ್ಯಂತ ಖಂಡನಾರ್ಹ ಎಂದು ಹೇಳಿದೆ.
ಕಾಶ್ಮೀರ ಕಣಿವೆ ಪರಿಸ್ಥಿತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದು, ಕಾಶ್ಮೀರಿ ಪಂಡಿತರ ಸುರಕ್ಷತೆ ಬಗ್ಗೆ ಹೆಚ್ಚಿನ ಒತ್ತು ನೀಡುವಂತೆ ಭದ್ರತಾ ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಗೃಹ ಇಲಾಖೆ, ಕಣಿವೆಯ ಭದ್ರತಾ ಪರಿಸ್ಥಿತಿ ಮತ್ತು ಪಂಡಿತರಿಗೆ ಹೆಚ್ಚಿನ ಭದ್ರತೆ ಒದಗಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಶೀಘ್ರದಲ್ಲೇ ಆರಂಭವಾಗುವ ಅಮರನಾಥ ಯಾತ್ರೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರದ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಮಿತ್ ಶಾ ಭದ್ರತಾ ಸಂಸ್ಥೆಗಳಿಗೆ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಭೂಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನಂಟ್‌ ಗವರ್ನರ್‌ ಮನೋಜ್ ಸಿನ್ಹಾ ಇದ್ದರು.
ಬಳಿಕ ಕೇಂದ್ರ ಮೀಸಲು ಪಡೆ ಮುಖ್ಯಸ್ಥ ಕುಲದೀಪ್ ಸಿಂಗ್, ಗಡಿ ಭದ್ರತಾ ಪಡೆ ಮುಖ್ಯಸ್ಥ ಪಂಕಜ್ ಸಿಂಗ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರೊಂದಿಗೆ ಅಮಿತ್ ಶಾ ಪ್ರತ್ಯೇಕ ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement