ಬೆಂಗಳೂರು: ರಾಜ್ಯದ ಆರ್ಎಸ್ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಕಳುಹಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ಎಸ್ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಯಾಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಆರ್ಎಸ್ಎಸ್ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸ್ ವಿಭಾಗಕ್ಕೆ ತುರ್ತು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ 4 ಆರ್ಎಸ್ಎಸ್ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ವಾಟ್ಸಪ್ ಸಂದೇಶವನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಗೆ ಕಳುಹಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಆರೋಪಿ ಸೆಂಥಿಲ್ನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ. ಹಾಗೂ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.
ಭಯೋತ್ಪದನೆ ಚಟುವಟಿಕೆಗಳಲ್ಲಿ ತೊಡಗಿದ್ದ ಜಮ್ಮು ಕಾಶ್ಮೀರದ ನಿವಾಸಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಜ್ಯದ ಪೊಲೀಸರೂ ಈ ಕುರಿತು ತನಿಖೆ ಆರಂಭಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಂಕಿತ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಬಂಧಿಸಲಾದ ಶಂಕಿತ ಉಗ್ರನಿಗೆ ನೆಲೆಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಮೊಬೈಲ್ ಫೋನ್ ಪಡೆಯಲು ಹಾಗೂ ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರೂ ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ