ಸೋನಿಯಾ ಗಾಂಧಿ, ರಾಹುಲ್‌ಗೆ ಇಡಿ ಸಮನ್ಸ್‌: ಬೆಂಗಳೂರಲ್ಲಿ ಇಡಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರತಿಭಟನೆ, ಸಿದ್ಧರಾಮಯ್ಯ, ಡಿಕೆಶಿ ಸೇರಿದಂತೆ ಹಲವರು ವಶಕ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ಶಾಂತಿನಗರದಲ್ಲಿರುವ ಇಡಿ (ಜಾರಿ ನಿರ್ದೇಶನಾಲಯ) ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ಮುಖಂಡರಾದ ರಾಹುಲ್‌ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಕೆಂಗಲ್ ಹನುಮಂತಯ್ಯ ರಸ್ತೆಯ ಲಾಲ್ ಬಾಗ್ ಗೇಟ್ ಬಳಿ ಕರ್ನಾಟಕ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರು ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆಯಲ್ಲೇ ಮಲಗಿದ್ದಾರೆ. ಬ್ಯಾರಿಕೇಡ್‌ ಹತ್ತಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಇಡಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಬೆಂಗಳೂರಿನ ಶಾಂತಿ ನಗರ ಬಸ್ ನಿಲ್ದಾಣದ ಬಳಿಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್ಸಿ ಯು.ಬಿ. ವೆಂಕಟೇಶ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು, ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಪೊಲೀಸರು ತೆರಳಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್‌ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು 7 ಕಿ.ಮೀ ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು. ದೆಹಲಿಯಲ್ಲಿ ಇದು ಬೃಹತ್ ಪ್ರತಿಭಟನೆಯ ರೂಪ ಪಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಇಡಿ ಸಮನ್ಸ್‌ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಇಡಿ ಕಚೇರಿ ಮುಂದೆ ನಡೆದ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಅನೇಕ ಕಾಂಗ್ರೆಸ್‌ ಹಿರಿಯ ಮುಖಂಡರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.
ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದರ ಹಿಂದೆ ದ್ವೇಷದ ರಾಜಕಾರಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಡೆಯನ್ನು ಖಂಡಿಸಲಾಯಿತು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement