ಕುಂದಾಪುರ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಶಾಸಕ ಎ.ಜಿ ಕೊಡ್ಗಿ ನಿಧನ

ಕುಂದಾಪುರ: ಕರಾವಳಿ ರಾಜಕೀಯ ರಂಗದ ಭೀಷ್ಮ ಎಂದೇ ಹೆಸರು ಪಡೆದಿದ್ದ ಹಿರಿಯ ರಾಜಕಾರಣಿ ಎ.ಜಿ.ಕೊಡ್ಗಿ (ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ) ಅವರು ಅನಾರೋಗ್ಯದಿಂದ ಇಂದು, ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಅವರಿಗೆ ಡೆಂಗೆ ಜ್ವರವಾಗಿತ್ತು ಎಂದು ಹೇಳಲಾಗಿದೆ. ಮೃತರು ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸುಮಾರು 56 ವರ್ಷಗಳ ಕಾಲ ರಾಜಕೀಯ ಜೀವನದಲ್ಲಿದ್ದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು 1972 ಮತ್ತು 1978ರಲ್ಲಿ ಬೈಂದೂರು ಕ್ಷೇತ್ರದ ಶಾಸಕರಾಗಿದ್ದರು. ಮೊದಲು ಕಾಂಗ್ರೆಸ್ಸಿನಲ್ಲಿದ್ದ ಅವರು, 1993ರಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆ ಸೇರಿದಂತೆ ಹಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

1929ರ ಅ.1ರಂದು ಕೃಷಿಕ ಕುಟುಂಬದಲ್ಲಿ ಜನಿಸಿದ್ದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರ ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರಾಗಿದ್ದರು. ಕಾನೂನು ಪದವಿ ಪಡೆದ ಕೊಡ್ಗಿ ಕೆಲಕಾಲ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ವಕೀಲರಾಗಿ ಕೆಲಸ ಮಾಡಿದ್ದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರಾಗಿದ್ದಾರೆ.
ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement