ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್‌ನಿಂದ ರಾಜಭವನ ಚಲೋ, ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸರ ವಶಕ್ಕೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ವಿರೋಧಿಸಿ ರಾಜಭವನ ಚಲೋ ಹೊರಟ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ವೃತ್ತದ ಬಳಿ ತಡೆದಿದ್ದಾರೆ ಹಾಗೂ ಮುಂದಕ್ಕೆ ಹೋಗದಂತೆ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಈ ವೇಳೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಮುಂದಾದರು. ಈ ವೇಳೆ ಸಿದ್ದರಾಮಯ್ಯ ಪ್ರತಿಭಟನಾ ಸ್ಥಳದಲ್ಲೇ ಧರಣಿ ಕುಳಿತರು. ಆದರೆ ಪೊಲೀಸರು ಸಿದ್ದರಾಮಯ್ಯ ಸೇರಿದಂತೆ ರಾಜಭವನ ಚಲೋ ಹೊರಟ್ಟಿದ್ದ ಘಟಾನುಘಟಿ ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಪೊಲೀಸರು ಹೊತ್ತುಕೊಂಡು ಹೋಗಿ ವಾಹನದ ಮೇಲೆ ಕೂಡ್ರಿಸಿದ್ದಾರೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

ಗುರುವಾರ ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಕಾಂಗ್ರೆಸ್ ಮುತ್ತಿಗೆ ಹಾಕುವ ಪ್ರತಿಭಟನೆ ಆರಂಭಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್‌ ನೀಡಿದೆ. ದೆಹಲಿಯ ಇಡಿ ಕಚೇರಿಯಲ್ಲಿ ರಾಹುಲ್ ಗಾಂಧಿ ಸತತ ಮೂರು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ದೆಹಲಿ ಪೊಲೀಸರು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲು ಎಐಸಿಸಿ ಕಚೇರಿಗೆ ನುಗ್ಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಅಷ್ಟೇ ಅಲ್ಲದೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಮುಖಂಡರ ಜೊತೆಗೂ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯದಲ್ಲೂ ಕಾಂಗ್ರೆಸ್ ಪ್ರತಿಭಟನೆಯನ್ನು ತೀವ್ರಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಗುರುವಾರ ರಾಜಭವನ ಚಲೋ ನಡೆಸುತ್ತಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ ಹಾಗೂ ನಾಯಕರನ್ನು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement