ಜೆಡಿಎಸ್‌ನಿಂದ ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಕೆ. ಶ್ರೀನಿವಾಸ ಗೌಡ ಉಚ್ಛಾಟನೆ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 10ರಂದು ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ, ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕರಾದ ಎಸ್‌.ಆರ್‌. ಶ್ರೀನಿವಾಸ್‌ (ಗುಬ್ಬಿ) ಮತ್ತು ಕೆ. ಶ್ರೀನಿವಾಸ ಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗಿದೆ.
ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್‌ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿತ್ತು. ಈ ನಿರ್ಣಯಕ್ಕೆ ಪೂರಕವಾಗಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್‌ ಇದ್ದರೂ ಅದನ್ನು ಈ ಇಬ್ಬರೂ ಶಾಸಕರು ಉಲ್ಲಂಘಿಸಿದ್ದಾರೆ. ಗುಬ್ಬಿ ಶ್ರೀನಿವಾಸ್‌ ಅವರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲೆಹರ್‌ ಸಿಂಗ್‌ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ ನೀಡಿದ್ದರು. ಕೆ. ಶ್ರೀನಿವಾಸ ಗೌಡ ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆ‍ಪಿಯ ಲೆಹರ್‌ ಸಿಂಗ್‌ ಅವರಿಗೆ ನೀಡಿದ್ದರು ಎಂದು ಜೆಡಿಎಸ್‌ ಮತಗಟ್ಟೆ ಏಜೆಂಟ್‌ ಎಚ್‌.ಡಿ. ರೇವಣ್ಣ ವರದಿ ನೀಡಿದ್ದಾರೆ ಎಂದು ಉಚ್ಚಾಟನೆ ಆದೇಶದಲ್ಲಿ ಹೇಳಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಶಾಸಕ ಎಚ್‌.ಡಿ. ರೇವಣ್ಣ ಸೇರಿದಂತೆ ಹಲವು ನಾಯಕರು ಪ್ರಮುಖರ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಂಡೆಪ್ಪ ಕಾಶೆಂಪುರ ಸುದ್ದಿಗಾರರಿಗೆ ತಿಳಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement