ಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆಗೆ ಅಕ್ಟೋಬರ್‌ 2ರಂದು ಚಾಲನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು, ಬುಧವಾರ ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸ್ತ್ರೀ ಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಪ್ರಥಮ ಬಾರಿ ಆಯವ್ಯಯದಲ್ಲಿ 1.5 ಲಕ್ಷ ರೂ.ಗಳ ಆರ್ಥಿಕ ನೆರವು, ಆ್ಯಂಕರ್ ಬ್ಯಾಂಕ್ ಜೋಡಣೆ, ಯಂತ್ರೋಪಕರಣ, ಪ್ರಾಜೆಕ್ಟ್‍ಗಳು, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುತ್ತದೆ. ಅಮೆಜಾನ್ ನಂತಹ ಆನ್‍ಲೈನ್ ವೇದಿಕೆಗಳಲ್ಲಿ ಈ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗುತ್ತಿದ್ದು,. ಪ್ರಾಯೋಗಿಕವಾಗಿ ಎಲಿವೇಟ್ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಒಂದು ಸ್ತ್ರೀಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ರೂ.ಗಳಷ್ಟು ವಹಿವಾಟನ್ನು ಮಾಡುತ್ತಿದೆ ಎಂದರು.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದ ಸ್ತ್ರೀ ಶಕ್ತಿಯ ಸಬಲೀಕರಣದ ಮೂಲಕ ನಮ್ಮ ಸ್ಥಳೀಯಮಟ್ಟದ ಸಂಘಸಂಸ್ಥೆಗಳ ಉತ್ಪನ್ನಗಳು ವಿದೇಶದಲ್ಲಿ ಮಾರಾಟವಾಗಬೇಕು ಎನ್ನುವ ಉದ್ದೇಶ ಸರ್ಕಾರದ್ದಾಗಿದೆ. ಆಗ ನಮ್ಮ ಆರ್ಥಿಕತೆಗೆ ಬಹಳ ಶಕ್ತಿ ಬರಲಿದೆ. ಈ ದೇಶದಲ್ಲಿನ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಬಂದಾಗ ಶೈಕ್ಷಣಿಕ, ಸಾಮಾಜಿಕವಾಗಿಯೂ ಸಬಲರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಸೇವಾಸಂಸ್ಥೆಗಳು ಸಮಾನತೆಯ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.
ರೈತ ಉತ್ಪನ್ನ ಸಂಘಗಳ ಮೂಲಕ ರೈತ ಉತ್ಪನ್ನಗಳ ಮೌಲ್ಯವರ್ಧನೆ, ಹೆಚ್ಚಿನ ದರದಲ್ಲಿ ಮಾರಾಟಕ್ಕೆ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು, ಅದನ್ನು ಕರ್ನಾಟಕದಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೀನುಗಾರಿಕೆ, ಕುಶಲಕರ್ಮಿಗಳಿಗೂ ಈ ಯೋಜನೆಗಳನ್ನು ವಿಸ್ತರಣೆ ಮಾಡಲಾಗುತ್ತಿದೆ. ಚೆನ್ನಪಟ್ಟಣದಲ್ಲಿ ಆಟಿಕೆ, ಇಳಕಲ್, ಬೆಳಗಾವಿ ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮೂರು ಸೀರೆ ಮೈಕ್ರೋಕ್ಲಸ್ಟರ್ ನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement