ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮಾನತಾಗಿರುವ ಐಎಎಸ್ ಅಧಿಕಾರಿ ಜೆ ಮಂಜುನಾಥ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜುಲೈ 11ಕ್ಕೆ ತೀರ್ಪು ಕಾಯ್ದಿರಿಸಿದೆ.
ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬವರಿಂದ 5 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ವ್ಯವಸ್ಥಾಪಕ ಮಹೇಶ್ ಮತ್ತು ಚೇತನಕುಮಾರ ಅಲಿಯಾಸ್ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಮಂಜುನಾಥ್ ಅವರು ಮೂರನೇ ಆರೋಪಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಸೋಮವಾರ ವಶಕ್ಕೆ ಪಡೆದಿದ್ದರು.
ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯವು ಮಂಜುನಾಥ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ