ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.
ಪ್ರತಿಯೊಬ್ಬರು ಇದನ್ನು ಅಳವಡಿಸಿಕೊಂಡು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ ಸೂಚಿಸಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶ ಆರಂಭವಾಗಲಿದ್ದು, ಆಗಸ್ಟ್‌ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್‌ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಹಾಗೂ ನವೆಂಬರ್‌ 2ರಿಂದ 14ರ ಅವಧಿಯಲ್ಲಿ ತರಗತಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಇದುವರೆಗೆ ಬೇರೆಬೇರೆ ವಿಶ್ವವಿದ್ಯಾಲಯಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನನುಕೂಲವಾಗುತ್ತಿತ್ತು. ಇದನ್ನು ಗಮನಿಸಿ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ. ಸೆಮಿಸ್ಟರ್‌ಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶದ ಅವಧಿ, ತರಗತಿಗಳು ಆರಂಭ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಮತ್ತು ಫ‌ಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭ ಇತ್ಯಾದಿ ಎಲ್ಲವನ್ನು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ತಿಳಿಸಿದರು.
ಪದವಿಯ 6, ಸ್ನಾತಕೋತ್ತರ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರ್‌ಗಳನ್ನು ಪರಿಗಣಿಸಲಾಗಿದೆ. ಸೆಮಿಸ್ಟರ್‌ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಅದನ್ನು ನಿರ್ವಹಿಸಬೇಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement