ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಾನಿಗೊಳಗಾದ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ನಿರ್ಮಾಣ ಅಥವಾ ದುರಸ್ತಿ ಸೇರಿದಂತೆ ಮೂಲಭೂತ ಸೌಕರ್ಯಗಳ ತುರ್ತು ಕೆಲಸಕ್ಕೆ ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಮಳೆಯಿಂದಾಗಿ ಬಹಳಷ್ಟು ರಸ್ತೆಗಳು ಹಾಳಾಗಿವೆ, ಹಲವೆಡೆ ಮೂಲಸೌಕರ್ಯಗಳಿಗೆ ಧಕ್ಕೆಯಾಗಿವೆ. ಹೀಗಾಗಿ ತಕ್ಷಣ ಮೂಲಸೌಕರ್ಯಗಳನ್ನು ಮರು ಸ್ಥಾಪನೆ ಮಾಡುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಮೂಲಸೌಕರ್ಯ ಹಾನಿಗೆ ಈ 500 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು. ಅಲ್ಲದೆ ತುರ್ತು ಪರಿಸ್ಥಿತಿ ನಿಭಾಯಿಸಲು ಜಿಲ್ಲಾಧಿಕಾರಿಗಳ ಖಾತೆಗೆ ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು. ಎಂದು ಬೊಮ್ಮಾಯಿ ತಿಳಿಸಿದರು.
ಮೂರು ಜಿಲ್ಲೆಗಳಲ್ಲಿ ಒಟ್ಟು 1062 ಮನೆಗಳಿಗೆ ಹಾನಿಯಾಗಿದೆ. 2387 ಕಿ.ಮೀ. ರಸ್ತೆಗಳು, 168 ಸೇತುವೆಗಳು ಮಳೆಯಿಂದ ಹಾನಿಗೊಳಗಾಗಿವೆ. ಹಾನಿಗೊಳಗಾಗಿರುವ ಮನೆಗಳಲ್ಲಿ ಸಂಪೂರ್ಣ ಹಾನಿಯಾಗಿರುವ ಎ ಕೆಟಗರಿ ಮನೆಗೆ 5 ಲಕ್ಷ ರೂ., ಬಿ ಕೆಟಗರಿ ಮನೆಗೆ ಮೂರು ಲಕ್ಷ ರೂ., ಸಿ ಕೆಟಗರಿಯ ಮನೆಗೆ 50 ಸಾವಿರ ರೂ. ಪರಿಹಾರ ನಿಡಲಾಗುವುದು. ಮನೆ ಸಂಪೂರ್ಣ ಹಾನಿಯಾದರೆ ತಕ್ಷಣ 10 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.


ನಿಮ್ಮ ಕಾಮೆಂಟ್ ಬರೆಯಿರಿ