ಬಾಯಿ ಮುಚ್ಕೊಂಡು ಕೆಲಸ ಮಾಡಿ, 224 ಅಭ್ಯರ್ಥಿಗಳೂ ಸಿಎಂ ಅಭ್ಯರ್ಥಿ​ಗಳೇ : ಪರೋಕ್ಷವಾಗಿ ಜಮೀರ್ ವಿರುದ್ಧ ಡಿಕೆಶಿ ಗುಡುಗು

ಬೆಂಗಳೂರು: ನನ್ನ ಲೆವೆಲ್‌ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತು ಹೇಳುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭೆ ಚುನಾವಣೆಗೆ ನಿಲ್ಲುವ ಎಲ್ಲ 224 ಅಭ್ಯರ್ಥಿಗಳೂ ಮುಖ್ಯಮಂತ್ರಿ ಅಭ್ಯರ್ಥಿಗಳೇ. ಈ ಬಗ್ಗೆ ಹೈ ಕಮಾಂಡ್‌ ನಿರ್ಧರಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಶಾಸಕ ಜಮೀರ್‌ ಅಹಮ್ಮದ್‌ಗೆ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಪಕ್ಷದ ಶಾಸಕ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ ಹಾಗೂ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಹೇಳಿದರು.

ಚುನಾವಣೆ ಫಲಿತಾಂಶಕ್ಕೆ ಮುನ್ನವೇ ನಾನು ಮುಖ್ಯಮಂತ್ರಿ ಎಂದು ಹೇಳುವುದು ಸರಿಯಲ್ಲ. ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ಅದನ್ನು ತೀರ್ಮಾನ ಮಾಡುತ್ತದೆ. ಫಲಿತಾಂಶ ಪ್ರಕಟವಾದ ನಂತರ ಅಂದಿನ ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ಯಾರಿಗೆ ನಾಯಕತ್ವಕ್ಕೆ ಕೊಡಬೇಕು ಎಂಬುದನ್ನು ತೀರ್ಮಾನ ಮಾಡುತ್ತದೆ. ಕಾಂಗ್ರೆಸ್​ಗೆ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿದೆ. ಅದು ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದಂತೆ ಅವರು ಪ್ರತಿಭಟನೆ ಮಾಡಿದ್ದಾರೆ ಎಂದು ಉತ್ತರಿಸಿದರು.
ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು ಎಂದು ಹೇಳಿದರು. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ನಾನು‌ ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ’ ಎಂಬ ಎಂ.ಬಿ. ಪಾಟೀಲ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ’ ಎಂದು ಪ್ರತಿಕ್ರಿಯಿಸಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement