ವಿಜಯೇಂದ್ರ ಸ್ಪರ್ಧೆ ವಿಚಾರ: ಬಿಜೆಪಿ ವರಿಷ್ಠರ ತೀರ್ಮಾನವೇ ಅಂತಿಮ ಎಂದ ಯಡಿಯೂರಪ್ಪ

ಬೆಂಗಳೂರು: ‘ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ನನ್ನ ಮಗ ಬಿ.ವೈ. ವಿಜಯೇಂದ್ರಗೆ ಬಿಟ್ಟು ಕೊಡುವುದಾಗಿ ಅಲ್ಲಿನ ಜನರ ಒತ್ತಾಯಕ್ಕೆ ಮಣಿದು ಶುಕ್ರವಾರ ಹೇಳಿಕೆ ನೀಡಿದ್ದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.
ಶನಿವಾರ ಮಾಧ್ಯದಮವರ ಜೊತೆ ಮಾತನಾಡಿದ ಅವರು, ಶುಕ್ರವಾರ ನಾನು ನೀಡಿದ ಹೇಳಿಕೆಯಿಂದ ಗೊಂದಲವಾಗಿದೆ. ನಾನು ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸ್ಪರ್ಧಿಸುವಂತೆ ಶಿಕಾರಿಪುರದ ಜನರು ಒತ್ತಾಯ ಮಾಡಿದ್ದರು. ಹೀಗಾಗಿ ನನ್ನ ಬದಲಿಗೆ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದೆ ಎಂದು ಅವರು ಸಮಜಾಯಿಷಿ ನೀಡಿದ್ದಾರೆ.
ಶಿಕಾರಿಪುರದ ಜನರ ಬೇಡಿಕೆಯಂತೆ ನಾನು ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿಕೆ ನೀಡಿದ್ದೆ. ಆದರೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪಕ್ಷದ ವರಿಷ್ಠರ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ’ ಎಂದರು.

ನಾನು ನೀಡಿರುವುದು ಸಲಹೆ ಮಾತ್ರ. ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ವರಿಷ್ಠರೇ ತೀರ್ಮಾನಿಸುತ್ತಾರೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ಅಮಿತ್‌ ಶಾ ಅವರು ಸೂಚಿಸಿದ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ವಿಜಯೇಂದ್ರಗೆ ಹಳೆ ಮೈಸೂರು ಸೇರಿದಂತೆ ಯಾವುದೇ ಭಾಗದಲ್ಲಿ ಸ್ಪರ್ಧಿಸಿದರೂ ಗೆದ್ದು ಬರುವ ಶಕ್ತಿಯಿದೆ ಎಂದು ತಿಳಿಸಿದರು.
ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಪುರಸಭೆ ಸದಸ್ಯನಾಗಿದ್ದ ನನ್ನನ್ನು ನಮ್ಮ ಪಕ್ಷ ನಾಲ್ಕು ಬಾರಿ ಮುಖ್ಯಮಂತ್ರಿ ಮಾಡಿದೆ. ಸಾಮಾನ್ಯ ಕಾರ್ಯಕರ್ತನನ್ನು ಇಷ್ಟು ಎತ್ತರಕ್ಕೆ ಬೆಳೆಸಿರುವುದೇ ಬಿಜೆಪಿ. ನನಗೆ ಸಮಾಧಾನವಿದೆ. ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ 140 ಶಾಸಕರನ್ನು ಗೆಲ್ಲಿಸಿಕೊಂಡು ಬಂದು, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ’ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement