ಉತ್ತರ ಕನ್ನಡಕ್ಕೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು: ಜನರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಸಿದ್ದರಾಮಯ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನಂತರ ಈಗ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಈ ಅಭಿಯಾನಕ್ಕೆ ಸ್ಪಂದಿಸಿರುವ ಸ್ಪೀಕರ್‌ ಕಾಗೇರಿ ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ ಅವರ ಜೊತೆಗೆ ಚರ್ಚಿಸಿರುವುದಾಗಿ ತಿಳಿಸಿದ್ದರು. ಅದರ ನಂತರ ಜಿಲ್ಲಾ ಉಸ್ತುವಾರಿ ಸಚಿವರುಉತ್ತರ ಕನ್ನಡ ಜಿಲ್ಲೆಯ ಹೃದಯ ಭಾಗವಾದ ಕುಮಟಾದ ಆಸುಪಾಸಿನಲ್ಲಿ ಸದ್ಯದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಎಲ್ಲರ ಸಹಕಾರವಿರಲಿ ಎಂದು ಟ್ವೀಟ್‌ ಮಾಡಿದ್ದರು. ಇದರ ನಂತರ ಈಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಬೆಂಬಲಿಸಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಕೆಲವೇ ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಉಡುಪಿಗೆ ರೋಗಿಗಳನ್ನು ಕರೆದೊಯ್ಯುವಾಗ ಆಂಬುಲೆನ್ಸ್‌ ಅಫಘಾತಕ್ಕೀಡಾಗಿ ನಾಲ್ವರು ಸಾವಿಗೀಡಾಗಿದ್ದರು. ಇದರ ನಂತರ ಉತ್ತರ ಕನ್ನಡಕ್ಕೆ ಆಸ್ಪತ್ರೆ ಬೇಕು ಎಂಬ ಬಹುದಿನಗಳ ಬೇಡಿಕೆಯ ಕೂಗು ಈಗ ಪ್ರಬಲವಾಗುತ್ತಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement