ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಕುರಿತು ಶೀಘ್ರವೇ ತೀರ್ಮಾನ: ಆರೋಗ್ಯ ಸಚಿವ ಡಾ.ಸುಧಾಕರ

ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಈಗ ಉತ್ತರ ಕನ್ನಡದ ಜನರಿಂದ ನಡೆಯುತ್ತಿರುವ ‘ನೋ ಹಾಸ್ಪಿಟಲ್ ನೋ ವೋಟ್‌ ’ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆ ಪಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ ಟ್ವೀಟ್‌ ಮಾಡಿದ್ದಾರೆ.
ಕೆಲದಿನಗಳ ಹಿಂದೆ ಶಿರೂರಿನಲ್ಲಿ ಆಂಬುಲೆನ್ಸ್‌ ಅಪಘಾತದ ನಂತರ ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬೇಕು ಎಂಬ ಅಭಿಯಾನ ಜೋರಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸುತ್ತಿರುವ ಆರೋಗ್ಯ ಸಚಿವ ಡಾ.ಸುಧಾಕರ ಅವರು, ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದು ಪ್ರಕಟಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಲಾಗುವುದು. ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಇದಕ್ಕೆ ಹಲವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ‘ನಮಗೆ ಭರವಸೆಗಳನ್ನು ಕೇಳಿ ಕೇಳಿ ಸಾಕಾಗಿದೆ. ಆಶ್ವಾಸನೆಯನ್ನು ಈಡೇರಿಸಿ’ ಎಂದು ಒತ್ತಾಯಿಸಿದ್ದಾರೆ.ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಸೌಲಭ್ಯಗಳ ಆಸ್ಪತ್ರೆ ಸ್ಥಾಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಅಭಿಯಾನದ ನಂತರ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕುಮಟಾ ಆಸುಪಾಸು ಮಲ್ಟಿ ಸ್ಪಶಾಲಿಟಿ ಆಸ್ಪತ್ರೆ ಆರಂಭಿಸುವ ಕುರಿತು ಶೀಘ್ರವೇ ಅಧಿಕೃತ ಮಾಹಿತಿ ನೀಡುವುದಾಗಿ ಟ್ವೀಟ್‌ ಮಾಡಿದ್ದಾರೆ. ನಂತರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹ ಅಭಿಯಾನಕ್ಕೆ ಸಂಪೂರ್ಣ ಬೆಂಬಲಿಸಿದ್ದಾರೆ ಹಾಗೂ ಉತ್ತರ ಕನ್ನಡದ ಜನರ ಬೇಡಿಕೆಯನ್ನು ಆದ್ಯತೆ ಮೇಲೆ ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement