ಪ್ರವೀಣ ಹತ್ಯೆ ಪ್ರಕರಣ; 15 ಮಂದಿ ವಶಕ್ಕೆ, ಈವರೆಗೆ ಯಾರನ್ನೂ ಬಂಧಿಸಿಲ್ಲ: ಎಡಿಜಿಪಿ ಅಲೋಕ್ ಕುಮಾರ್​

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ ನೆಟ್ಟಾರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಎಸ್​​ಪಿ, ತಹಸೀಲ್ದಾರ್​ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
ಬೆಳ್ಳಾರೆ ನಗರ ಠಾಣೆಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ದೇವಜ್ಯೋತಿ ರೇ, ಎಸ್​ಪಿ ಸೋನವಾಲೆ, ಹೆಚ್ಚುವರಿ ಎಸ್​ಪಿ ಕುಮಾರಚಂದ್ರ ಮತ್ತು , ತಹಸೀಲ್ದಾರ್ ಅವರು ಭೇಟಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ.

ಪ್ರವೀಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಕೊಲೆಗೆ ಮೂರು ಕಾರಣಗಳಿರುವ ಶಂಕೆಯಿದೆ. ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯ ಪಡೆದು 6 ತಂಡಗಳನ್ನು ರಚನೆ ಮಾಡಿದ್ದೇವೆ.  ಇದುವರೆಗೆ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ವಶಕ್ಕೆ ಪಡೆದಿರುವವರು ಯಾವ ಭಾಗದವರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಅವರಲ್ಲಿ ಇನ್ನೂ ಯಾರನ್ನೂ ಬಂಧಿಸಿಲ್ಲ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದುಎಂದು ಅಲೋಕ್​ ಕುಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇಂದು, ಬುಧವಾರ ಪ್ರವೀಣ್ ಅಂತಿಮ ದರ್ಶನಕ್ಕೆ ಸಂಸದರು ಹಾಗೂ ಸಚಿವರು ಸ್ಥಳಕ್ಕೆ ಬಂದಿದ್ದಾಗ ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ನಾವು ಪರಿಸ್ಥಿತಿಯನ್ನು ಹತೋಟಿಗೆ ತರಲು ಲಘು ಲಾಠಿ ಪ್ರಹಾರ ಮಾಡಬೇಕಾಯಿತು. ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಮಾಹಿತಿ ನೀಡಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement