ಹಿಂದೂ ಕಾರ್ಯಕರ್ತರ ಹತ್ಯೆ; ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ರಾಜೀನಾಮೆ ನೀಡುವೆ ಎಂದ ರೇಣುಕಾಚಾರ್ಯ

ಬೆಂಗಳೂರು: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತನನ್ನು ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಕೆಲವೇ ಗಂಟೆಗಳ ನಂತರ, ರಾಜ್ಯವು ಹತ್ಯೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ ನೀಡುವುದಾಗಿ ರಾಜ್ಯ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಅವರು ಟ್ವೀಟ್‌ ಮಾಡಿದ್ದಾರೆ.
ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ನಮ್ಮ ಸರ್ಕಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ​​ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಪ್ರತಿ ಬಾರಿ ಹಿಂದೂ ಕಾರ್ಯಕರ್ತರುಗಳ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ಗಳಿಂದ ಏನೂ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಹಿಂದೂ ಕಾರ್ಯಕರ್ತರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು ಎಂದು ಹೇಳಿದ್ದಾರೆ.

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಈವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನತೆಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ದಾಕ್ಷಿಣ್ಯ ಕ್ರಮಗಳು.

ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಕೋಳಿ ಅಂಗಡಿಯ ಮಾಲೀಕ ಪ್ರವೀಣ ನೆಟ್ಟಾರು ಅವರ ಮೇಲೆ ಮಂಗಳವಾರ ರಾತ್ರಿ 9:30 ರ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದೃು. ನಂತರ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement