ಪ್ರವೀಣ್ ಹತ್ಯೆ ಘಟನೆ: ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳಿಂದ ರಾಜೀನಾಮೆ ಪರ್ವ ಆರಂಭ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ​ ನೆಟ್ಟಾರ​ ಅವರನ್ನು ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಪದಾಧಿಕಾರಿಗಳು ಆರಂಭಿಸಿರುವ ರಾಜೀನಾಮೆ ಪರ್ವ ಈಗ ರಾಜ್ಯಾದ್ಯಂತ ವ್ಯಾಪಕತೆ ಪಡೆಯುತ್ತಿದೆ. ಒಂದು ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಯುವ ಪದಾಧಿಕಾರಿಗಳು ರಾಜೀನಾಮೆಗೆ ಮುಂದಾಗಿದ್ದಾರೆ.
ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕಿ ಶಕುಂತಲಾ ನಟರಾಜ, ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಸೇರಿದಂತೆ ಅನೇಕ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಿಗೆ ರಾಜ್ಯದ ವಿವಿಧ ಭಾಗಗಳಲ್ಲಿನ ಬಿಜೆಪಿ ಯುವ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ.

ಮೈಸೂರಿನ ಎನ್.ಆರ್.ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಸೇರಿದಂತೆ ನಾಲ್ವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಡಿ.ಲೋಹಿತ್, ಪ್ರಧಾನ ಕಾರ್ಯದರ್ಶಿಗಳಾದ ಧನರಾಜ್, ನವೀನ್ ಶೆಟ್ಟಿ, ಕಾರ್ಯದರ್ಶಿಗಳಾದ ಎಂ.ರಾಜು,ಜಿ.ಅರುಣ್ ಅವರು ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ, ಬೇಸರದಿಂದ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಾಗಲಕೋಟೆಯ ತೇರದಾಳ ಶಾಸಕ ಸಿದ್ದು ಸವದಿ ಅವರ ಪುತ್ರ ವಿದ್ಯಾಧರ ಸವದಿ ಬಾಗಲಕೋಟೆ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಶ್ರೀನಿವಾಸ ಪೂಜಾರಿ ಅವರ ಕ್ಷೇತ್ರವಾದ ಕೋಟದ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸುಶಾಂತ್ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.
ಗಂಗಾವತಿ ಬಿಜೆಪಿ ನಗರ ಯುವ ಘಟಕದ ಅಧ್ಯಕ್ಷ ಸೇರಿದಂತೆ ಇತರೆ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಗಂಗಾವತಿ ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷ ಕೆ. ವೆಂಟಕೇಶ ಚಿಕ್ಕಜಂತಕಲ್ ತಮ್ಮ ರಾಜೀನಾಮೆಯನ್ನು ನಗರ ಘಟಕದ ಅಧ್ಯಕ್ಷ ಕಾಶಿನಾಥ ಚಿತ್ರಗಾರ ಅವರಿಗೆ ರವಾನಿಸಿದ್ದಾರೆ. ಪಕ್ಷ ಅಧಿಕಾರದಲ್ಲಿದ್ದರೂ ನಮಗೆ ರಕ್ಷಣೆ ಇಲ್ಲವಾಗಿದ್ದು, ಕೊಲೆಗಡುಕರ ಮೇಲೆ ಕಠಿಣ ಕ್ರಮದ ಭರವಸೆ ಕೇವಲ ಭರವಸೆಯಾಗಿಯೇ ಉಳಿದಿದೆ. ಹೀಗಾಗಿ ಪ್ರವೀಣ​​ ಹತ್ಯೆ ಖಂಡಿಸಿ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದೇವೆ ಎಂದು ವೆಂಕಟೇಶ್​ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮಂಡಲದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ್ ಅವರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ಕಾರಟಗಿ ಮಂಡಲ ಮಹಿಳಾ ಪ್ರಧಾನ ಕಾರ್ಯದರ್ಶಿ ಸುಹಾಸಿನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಹತ್ಯೆ, ಸರ್ಕಾರದ ವೈಫಲ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿ ಸ್ಥಾನಕ್ಕೆ ಮಾಜಿ ಜಿಲ್ಲಾಧ್ಯಕ್ಷ ಮಾಚಿಮಾಡ ರವೀಂದ್ರ ರಾಜೀನಾಮೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರ್ಮಿಕ ಜಿಲ್ಲಾ ಪ್ರಕೋಷ್ಠಕದ ಸಂಚಾಲಕ ಶಿವಕುಮಾರ್ ಅದೋನಿ ಕೂಡ ರಾಜೀನಾಮೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ ಹಿರೇಮಠ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಪ್ರವೀಣ್ ಹತ್ಯೆಗೆ ನ್ಯಾಯ ಸಿಗುವವರೆಗೂ ಸಂಘಟನೆಯಲ್ಲಿ ಕೆಲಸ ಮಾಡುವುದಿಲ್ಲ, ಅಗತ್ಯ ಬಿದ್ದರೆ ರಾಜೀನಾಮೆಗೂ ಸಿದ್ಧ ಎಂದು ಚಿತ್ರದುರ್ಗದ ಹೊಸದುರ್ಗ ಮಂಡಲ ಉಪಾಧ್ಯಕ್ಷ ಮಂಜು ಸಾಣೇಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದು, ಹೊಸದುರ್ಗ ಮಂಡಲ ಕಾರ್ಯದರ್ಶಿ ಎನ್.ಆರ್. ಜಗದೀಶ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ರಮೇಶ್ ಗೂಳಿಹಟ್ಟಿ ಸೇರಿ ಹಲವು ಕಾರ್ಯಕರ್ತರು ಸಂಘಟನೆಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಪತ್ರಮುಖೇನ ತಿಳಿಸಿದ್ದಾರೆ.
ದಾವಣಗೆರೆಯಲ್ಲೂ ಯುವ ಮೋರ್ಚಾ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿ ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿಯವರಿಗೆ ರವಾನಿಸಿದ್ದಾರೆ. ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್ ಎಲ್ ಶಿವಪ್ರಕಾಶ್ ಸೇರಿದ್ದಂತೆ ಜಿಲ್ಲೆಯ ಎಂಟು ಮಂಡಲದ ಅಧ್ಯಕ್ಷರೊಳಗೊಂಡು ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement