ಬಿಬಿಎಂಪಿ ಚುನಾವಣೆ: ವಾರದೊಳಗೆ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆಗೆ ಕಾಲ ಕೂಡಿಬಂದಿದ್ದು, ಇಂದಿನಿಂದ ಒಂದು ವಾರದೊಳಗೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳನ್ನೂ ಒಳಗೊಂಡಂತೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ, ಅಧಿಸೂಚನೆ ಹೊರಡಿಸಬೇಕು. ಆನಂತರ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್‌ ಆದೇಶಿಸಿದೆ.
ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಡಾ. ಬಿ ಆರ್‌ ಅಂಬೇಡ್ಕರ್‌ ದಲಿತ ಸಂಘರ್ಷ ಸಮಿತಿ ಹಾಗೂ ಭಾಸ್ಕರ್‌ ಎಂಬವರು ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ವಿಶೇಷ ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಜೆ ಬಿ ಪರ್ದಿವಾಲಾ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಕಾನೂನಿನ ನಿಬಂಧನೆಗಳು ಮತ್ತು ಸಾಂವಿಧಾನಿಕ ಮಾನದಂಡಗಳ ಪಾಲನೆಯ ಭಾಗವಾಗಿ ಚುನಾವಣಾ ಆಯೋಗವು ನಿರ್ದಿಷ್ಟ ಕಾಲಮಿತಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಅನುವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಕ್ಷಣ ಹಿಂದುಳಿದ ವರ್ಗ ಸೇರಿದಂತೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ವಾರ್ಡ್‌ವಾರು ಮೀಸಲಾತಿ ಪ್ರಕಟಿಸುವುದನ್ನು ರಾಜ್ಯ ಸರ್ಕಾರ ತಡ ಮಾಡಿದರೆ ಪ್ರತಿವಾದಿಗಳು ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯ ಹೊಂದಿರುತ್ತಾರೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ಬಿಬಿಎಂಪಿ ವ್ಯಾಪ್ತಿಯಲ್ಲಿನ ವಾರ್ಡ್‌ಗಳ ಪುನರ್‌ ವಿಂಗಡಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನೀಡಿದ್ದ ನಿರ್ದೇಶನವನ್ನು ಪಾಲನೆ ಮಾಡಲಾಗಿದೆ. ಜುಲೈ 14ರಂದು ಅಧಿಸೂಚನೆ ಪ್ರಕಟಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸಮಿತಿಯು ಜುಲೈ 21ರಂದು ವರದಿ ಸಲ್ಲಿಸಿದೆ” ಎಂದು ಹೇಳಿದರು.
ರಾಜ್ಯ ಚುನಾವಣಾ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು ಆಯೋಗಕ್ಕೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ನೀಡಲಾಗಿಲ್ಲ. ಅದು ತಲುಪಿದ ತಕ್ಷಣ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಲಿದೆ ಎಂದು ಪೀಠಕ್ಕೆ ತಿಳಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement