ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಜನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಈಘ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಒತ್ತಾಯಿಸಲಾಗಿದೆ.
ಕಾರವಾರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಿದ್ದು, ನಗರದಲ್ಲಿ ಶೀಘ್ರವಾಗಿ ಆಸ್ಪತ್ರೆ ಸ್ಥಾಪಿಸದಿದ್ದರೆ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ತಮ್ಮ ದೇಹದ ರಕ್ತ ತೆಗೆದು ಬರೆದಿರುವ ಪತ್ರದಲ್ಲಿ ‘ವೀ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್, ನಮಗೆ ಬೇಕು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಎಂದು ಬರೆದು ಪ್ರಧಾನಿಗೆ ಕಳುಹಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು (Multi Speciality Hospital for Uttara Kannada District) ಎನ್ನುವ ಮಾತಿಗೆ ಈಗ ಚಳವಳಿ ರೂಪ ಬಂದಿದೆ. ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಜಿಲ್ಲಾದ್ಯಂತ ಪ್ರಯತ್ನಗಳು ನಡೆಯುತ್ತಿವೆ. ಈ ಮೊದಲು ಹೇಳಿದಂತೆ ಆಗಸ್ಟ್ 1ರಿಂದ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನ ಜಿಲ್ಲೆಯಲ್ಲಿ ಆರಂಭವಾಗಿದೆ.

ಭೌಗೋಳಿಕವಾಗಿ ವಿಸ್ತಾರವಾಗಿರುವ ಹಾಗೂ ಅರಣ್ಯ ಪ್ರದೇಶಗಳು ಹಾಗೂ ಗುಡ್ಡಗಾಡುಗಳಿಂದ ಕೂಡಿರುವ ಉತ್ತರ ಜಿಲ್ಲೆಯಲ್ಲಿ ಒಂದೇ ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇದೇ ಕಾರಣಕ್ಕೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಬೇರೆ ಜಿಲ್ಲೆಗಳ ದೂರದ ಪ್ರದೇಶಗಳಾದ ಉಡುಪಿ, ಮಂಗಳೂರು, ಹುಬ್ಬಳ್ಳಿ ಅಥವಾ ಪಕದ ರಾಜ್ಯ ಗೋವಾಕ್ಕೆ ಹೋಗಬೇಕಾಗಿದೆ. ಜುಲೈ 20 ರಂದು ಕುಂದಾಪುರ ತಾಲೂಕು ಶಿರೂರು ಬಳಿ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತದಲ್ಲಿ ಹೊನ್ನಾವರ ತಾಲೂಕಿನ ನಾಲ್ವರು ಸಾವಿಗೀಡಾದ ನಂತರ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಕೂಗು ಗಟ್ಟಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement