ಪಂಚಮಸಾಲಿ ಮೀಸಲಾತಿ ಪ್ರಕರಣ: ನ್ಯಾ. ಸುಭಾಷ್‌ ಆಡಿ ನೇತೃತ್ವದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 3ಎ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಬುಧವಾರ ನೋಟಿಸ್‌ ಜಾರಿ ಮಾಡಿರುವ ಕರ್ನಾಟಕ ಹೈಕೋರ್ಟ್‌, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆಗೆ ಮಾಡಬೇಕು ಎಂಬ ಬೇಡಿಕೆ ಪರಿಶೀಲಿಸಿ ವರದಿ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ ಅಡಿ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ಎಸ್‌ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಉನ್ನತ ಮಟ್ಟದ ಸಮಿತಿಯನ್ನು ಪ್ರತಿನಿಧಿಸಿದ್ದ ವಕೀಲ ಕೆ ಎನ್‌ ನಿತೀಶ್‌ ಅವರು “ಸಮಿತಿಯಿಂದ ಸಲಹೆ- ಸೂಚನೆ ಪಡೆಯಲು ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ,“ಅರ್ಜಿಯಲ್ಲಿ ಉನ್ನತ ಮಟ್ಟದ ಸಮಿತಿಯ ಪಾತ್ರವೇನು ಇಲ್ಲ. ಔಪಚಾರಿಕವಾಗಿ ಅವರನ್ನು ಪಕ್ಷಕಕಾರರನ್ನಾಗಿಸಲಾಗಿದೆ ಅಷ್ಟೆ. ರಾಜ್ಯ ಸರ್ಕಾರ ಮಾಡಿರುವ ಆದೇಶವನ್ನು ವಜಾ ಮಾಡಬೇಕು ಎಂದು ಕೋರಿದ್ದೇವೆ” ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ಸಮಿತಿಯ ಹೆಸರಿನ ಮುಂದೆ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಆಡಿ ಎಂದು ಉಲ್ಲೇಖಿಸಲಾಗಿದೆ. ಇದನ್ನು ತೆಗೆಯಬೇಕು. ಅಧ್ಯಕ್ಷರು ಸಮಿತಿಯನ್ನು ಪ್ರತಿನಿಧಿಸಲಿದ್ದಾರೆ. ಅಲ್ಲದೇ, ಸಮಿತಿಯು ಪಕ್ಷಕಾರರಾಗಿರುವುದರಿಂದ ಆಕ್ಷೇಪಣೆ ಸಲ್ಲಿಸಲಿ” ಎಂದರು.
ಇದನ್ನು ಆಲಿಸಿದ ಪೀಠವು ಸಮಿತಿಗೆ ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ. ಅಲ್ಲದೇ, ನಿವೃತ್ತ ನ್ಯಾ. ಆಡಿ ಅವರ ಬದಲಿಗೆ ಅಧ್ಯಕ್ಷರು ಎಂದು ಸರಿಪಡಿಸಬೇಕು. ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಮುಂದಿನ ಆದೇಶದವರೆಗೆ ಮುಂದುವರಿಯದಂತೆ ಉನ್ನತ ಮಟ್ಟದ ಸಮಿತಿಗೆ ನಿರ್ದೇಶಿಸಿರುವ ಮಧ್ಯಂತರ ಆದೇಶವು ಮುಂದುವರಿಯಲಿದೆ ಎಂದು ಪೀಠ ಹೇಳಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement