
ತುಮಕೂರು: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.
ಪಿತೃ ಪಕ್ಷ ಆರಂಭಕ್ಕೂ ಮುನ್ನ ಬಿಜೆಪಿ ಸೇರಲು ಅವರು ಸಿದ್ಧತೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದು, ಈ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಅವರು ಕಾಂಗ್ರೆಸ್ ನಾಯಕರ ಬಳಿ ಕೋರಿದ್ದರು. ಆದರೆ ಇದು ಸಾಧ್ಯವಾಗುವ ಲಕ್ಷಣಗಳು ಕಾಣದಿದ್ದಾಗ ಅವರು ಕಾಂಗ್ರೆಸ್ ತೊರೆದಿದ್ದು, ಈಗ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಕುಣಿಗಲ್ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಡಿ.ಕೃಷ್ಣಕುಮಾರ್ ಪುನಃ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಅವರ ಮನವೊಲಿಸಿ, ಅವರ ಬದಲಿಗೆ ಮುದ್ದಹನುಮೇಗೌಡರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಒಂದು ವೇಳೆ ಕೃಷ್ಣಕುಮಾರ್ ಬಂಡಾಯವೆದ್ದರೆ ಅವರನ್ನು ಯಾವ ರೀತಿ ಸಮಾಧಾನ ಮಾಡಬೇಕು, ಹಾಗೂ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡು ಹೇಗೆ ಚುನಾವಣೆ ಎದುರಿಸಬೇಕು ಎಂದು ತಂತ್ರಗಾರಿಕೆ ರೂಪಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ