ಇಡಬ್ಲ್ಯೂಎಸ್ ಮೀಸಲಾತಿ: ಸೆಪ್ಟೆಂಬರ್‌ 13ರಿಂದ ವಿಚಾರಣೆ ಆರಂಭಿಸಲಿರುವ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ

ನವದೆಹಲಿ: ಆರ್ಥಿಕವಾಗಿ ದರ್ಬಲ ವರ್ಗಗಳಿಗೆ (ಇಡಬ್ಲ್ಯೂಎಸ್) ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸೆಪ್ಟೆಂಬರ್‌ 13ರಿಂದ ವಿಚಾರಣೆ ಪ್ರಾರಂಭಿಸುವುದಾಗಿ ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ.
ಈ ವಿಷಯದ ಕುರಿತು ಒಟ್ಟು 40 ಅರ್ಜಿಗಳಿವೆ. ಈ ಎಲ್ಲದರ ಕುರಿತು ವಾದ ಮಂಡಿಸಲು ಕನಿಷ್ಠ 18 ಗಂಟೆಗಳಾದರೂ ಬೇಕು ಎಂದು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಸೇರಿದಂತೆ ಐವರು ನ್ಯಾಯಮುರ್ತಿಗಳ ಪೀಠವು ಅಭಿಪ್ರಾಯಪಟ್ಟಿತು.
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಶೇ 10 ರಷ್ಟು ಮೀಸಲಾತಿ ಒದಗಿಸಿದ ಸಂವಿಧಾನದ (ನೂರಾಮೂರನೇ) ತಿದ್ದುಪಡಿ ಕಾಯಿದೆಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು 2020ರ ಆಗಸ್ಟ್‌ನಲ್ಲಿ ಅಂದಿನ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೋಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಐವರು ಸದಸ್ಯರ ಸಾಂವಿಧಾನಿಕ ಪೀಠಕ್ಕೆ ಉಲ್ಲೇಖಿಸಿತ್ತು.

ಇಂದು ನಡೆದ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್ ರವೀಂದ್ರ ಭಟ್, ಬೇಲಾ ಎಂ ತ್ರಿವೇದಿ ಹಾಗೂ ಜೆ ಬಿ ಪರ್ದಿವಾಲಾ ಅವರಿರುವ ಐವರು ಸದಸ್ಯರ ಸಾಂವಿಧಾನಿಕ ಪೀಠ 5 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ನಿರ್ಧರಿಸಿರುವುದಾಗಿ ತಿಳಿಸಿದೆ.ಎಲ್ಲಾ ವಕೀಲರಿಗೂ ಸಮಯಾವಕಾಶ ನೀಡಲಾಗುವುದು. ಸುಗಮ ವಿಚಾರಣೆಗಾಗಿ ಗುರುವಾರ ಕೆಲವು ನಿರ್ದೇಶನಗಳನ್ನು ನೀಡಲಾಗುವುದು ಎಂದು ಹೇಳಿತು.
ಸಂವಿಧಾನದ 103 ನೇ ತಿದ್ದುಪಡಿ ಕಾಯಿದೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10 ಮೀಸಲಾತಿ ನೀಡುತ್ತದೆ.
ಮೀಸಲಾತಿಯ ಕುರಿತು ದೇಶದ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆ ಮಾಡಬೇಕು ಎಂದು ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement