ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ಕುಟುಂಬ ಸದಸ್ಯರ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯದ ಆದೇಶ

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಿಸಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೋಲೀಸರಿಗೆ ಆದೇಶ ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು 2021ರ ಜೂನ್‌ನಲ್ಲಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್‌ ಅವರು ತನಿಖೆ ನಡೆಸಿ, ನವೆಂಬರ್‌ 2ರ ಒಳಗೆ ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ಆರೋಪಿಗಳ ವಿರುದ್ದ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ಸೆಕ್ಷನ್‌ಗಳಾದ 7, 8, 9, 10 ಮತ್ತು 13, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 383, 384, 415, 418, 420, 34 ಮತ್ತು 120ಬಿ ಅಡಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್‌ 156(3)ರ ಅಡಿ ತನಿಖೆ ನಡೆಸುವಂತೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯವು ಆದೇಶಿಸಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ಕೆಲದಿನಗಳ ಹಿಂದೆ ಹೈಕೋರ್ಟ್‌, ವಿಶೇಷ ತನಿಖಾ ದಳದಿಂದ (ಎಸ್‌ಐಟಿ) ತನಿಖೆಗೆ ಆಗ್ರಹಿಸಿ ಅಬ್ರಹಾಂ ಸಲ್ಲಿಸಿದ್ದ ಮನವಿಯನ್ನು ಭಾಗಶಃ ಎತ್ತಿ ಹಿಡಿದಿತ್ತು. ರಾಜ್ಯಪಾಲರಿಂದ ಅಗತ್ಯ ಪೂರ್ವನುಮತಿ ಪಡೆದಿಲ್ಲ ಎಂದು ಯಡಿಯೂರಪ್ಪ ಮತ್ತು ಇತರರ ವಿರುದ್ದದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶವನ್ನು ಹೈಕೋರ್ಟ್ ಪಕ್ಕಕ್ಕೆ ಸರಿಸಿ ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು, ಬುಧವಾರ ತನಿಖೆಗೆ ಆದೇಶಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಹೇಳಿದೆ.
ಯಡಿಯೂರಪ್ಪ, ಪುತ್ರ ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್‌ ಶ್ರೀ, ಚಂದ್ರಕಾಂತ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌, ಐಎಎಸ್‌ ಅಧಿಕಾರಿ ಡಾ. ಜಿ ಸಿ ಪ್ರಕಾಶ್‌, ಕೆ ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ‌ ಯಮಕನಮರಡಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement